ಬೆಳಗಾವಿ: ರಾಜ್ಯದಲ್ಲಿ ಕೆಲವು ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ. ಈ ವಿಚಾರವಾಗಿ ಮಹಿಳೆಯರು ಪ್ರಶ್ನಿಸುತ್ತಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar), 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸುಖಾ ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಇಲ್ಲಿಯವರೆಗೂ ಮಹಿಳೆಯರ ಖಾತೆಗೆ ಹಣ ಜಮಾ ಆಗಿದೆ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕೆಂದು ನಿರ್ಧರಿಸಿದ್ದರಿಂದಾಗಿ ಅದು ತಡವಾಗಿದೆ. ಆದರೆ, ಯಾವುದೇ ಕಾರಣಕ್ಕೂ ಯೋಜನೆ ನಿಲ್ಲುವುದಿಲ್ಲ ಎಂದಿದ್ದಾರೆ.
ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯ ಕುರಿತು ಸಚಿವೆ ಪ್ರತಿಕ್ರಿಯೆ ನೀಡಿದ ಅವರು, ಘಟನೆಯನ್ನು ನಾನು ಖಂಡಿಸುತ್ತೇನೆ. ಘಟನೆ ನಡೆದು ಐದೇ ನಿಮಿಷಕ್ಕೆ ಕಮೀಷನರ್ ಜೊತೆ ನಾನು ಮಾತನಾಡಿದ್ದೆ. ಯಾರು ತಪ್ಪಿತಸ್ಥರೋ ಅವರ ಮೇಲೆ ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ನಾವೆಲ್ಲರೂ ಮೊದಲು ಭಾರತೀಯರು ಕನ್ನಡಿಗರು ಸ್ವರಾಜ್ಯದ ಬಗ್ಗೆ ಮಾತನಾಡಿದಾಗ ನಾಲ್ಕೈದು ಪುಂಡರು ಬಂದು ಭಾಷಾ ವಿವಾದ ಎಳೆದು ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ಸರಿಯಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದಿದ್ದಾರೆ.