ಬೆಂಗಳೂರು: ದೂರು ನೀಡಲು ಬಂದ ಅತ್ಯಾಚಾರ ಸಂತ್ರಸ್ತೆ ಮೇಲೆ ಕಾನ್ ಸ್ಟೇಬಲ್ ಆತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ದೂರು ನೀಡಲು ಠಾಣೆಗೆ ಹೋದ ಆತ್ಯಾಚಾರಕ್ಕೊಳಗಾದ ಅಪ್ರಾಪ್ತೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಅಪ್ರಾಪ್ತೆ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೊಮ್ಮನಹಳ್ಳಿ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಹಾಗೂ ಸಂತ್ರಸ್ತೆಯ ಸ್ನೇಹಿತನಾಗಿದ್ದ ವಿಕ್ಕಿ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
17 ವರ್ಷದ ಸಂತ್ರಸ್ತೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಪಕ್ಕದ ಮನೆ ನಿವಾಸಿ ವಿವಾಹಿತನಾಗಿದ್ದ ವಿಕ್ಕಿ ಪರಿಚಯವಾಗಿದ್ದ. ಪ್ರೀತಿಸಿ ಮದುವೆ ಮಾಡಿಕೊಳ್ಳುವುದಾಗಿ ಫುಸಲಾಯಿಸಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಈ ವಿಷಯವನ್ನು ಅಪ್ರಾಪ್ತೆ ತನ್ನ ತಾಯಿಯ ಮುಂದೆ ಹೇಳಿಕೊಂಡಿದ್ದರು. ಹೀಗಾಗಿ ತಾಯಿ ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು.
ದೂರು ನೀಡಲು ಹೋದ ಸಂತ್ರಸ್ತೆಯನ್ನು ಕಾನ್ ಸ್ಟೇಬಲ್ ಅರುಣ್ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಪರಿಚಯಿಸಿಕೊಂಡಿದ್ದ. ಅಲ್ಲದೇ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಕಳೆದ ಡಿಸೆಂಬರ್ ನಲ್ಲಿ ಬಿಟಿಎಂ ಲೇಔಟ್ ಓಯೋ ರೂಮಿಗೆ ಬಾಲಕಿಯನ್ನು ಕರೆಯಿಸಿದ್ದಾನೆ. ಅಲ್ಲಿ ಮದ್ಯದ ಬಾಟೆಲ್ ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಕುಡಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಖಾಸಗಿ ವಿಡಿಯೊಗಳಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಕೋ ಲೇಔಟ್ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.