ಬೆಂಗಳೂರು: ಈಗಾಗಲೇ ಬೇಸಿಗೆ ಕಾಲ ಬಂದಿದೆ. ಇನ್ನೊಂದೆಡೆ ಉಚಿತ ವಿದ್ಯುತ್ ನೀಡಲಾಗಿದೆ. ಹೀಗಾಗಿ ಜನರಿಗೆ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಆಗಬಹುದು ಎಂಬ ಆತಂಕ ಎದುರಾಗಿದೆ. ಆದರೆ, ಸರ್ಕಾರ ಲೋಡ್ ಶೆಡ್ಡಿಂಗ್ ವಿಷಯದಲ್ಲಿ ಜನರಿಗೆ ಭರವಸೆ ನೀಡಿದೆ.
ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದೆ. ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ (K. J.George) ಹೇಳಿದ್ದಾರೆ
ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಗೆ (Electricity Supply) ಸಂಬಂಧಿಸಿದಂತೆ ಎಸ್ಕಾಂಗಳ ಅಧ್ಯಕ್ಷರು ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿದ ಅವರು, ಬೇಸಿಗೆಯಲ್ಲಿ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿ ದಿನ 7 ಗಂಟೆ ಹಾಗೂ ಇನ್ನಿತರ ಉದ್ಧೇಶಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವ ಹಾಗೂ ಇನ್ನಿತರ ಉದ್ದೇಶಗಳಿಗೆ 24 ಗಂಟೆ ವಿದ್ಯುತ್ ಪೂರೈಸುವ ವಾಗ್ಧಾನ ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿಲಾಗಿದೆ ಎಂದು ಹೇಳಿದ್ದಾರೆ.
ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಬಹುದೇ ಹೊರತು, ಲೋಡ್ ಶೆಡ್ಡಿಂಗ್ ಮಾಡುವ ಸಂದರ್ಭ ಉದ್ಭವವಾಗುವುದಿಲ್ಲ. ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ ಎಂದರೆ ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುಂದುವರಿಯುತ್ತಿದೆ ಎಂದರ್ಥ ಎಂದಿದ್ದಾರೆ.
ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಆದರೂ ಸಂಗ್ರಹಣೆಗೆ ಅವಕಾಶ ಇಲ್ಲ. ಹೀಗಾಗಿ, ಶರಾವತಿ ಪಂಪ್ಡ್ ಸ್ಟೋರೇಜ್ ಮೂಲಕ 2000 ಮೆ.ವ್ಯಾ. ವಾರಾಹಿ ಪಂಪ್ಡ್ ಸ್ಟೋರೇಜ್ ಮೂಲಕ 1600 ಮೆ.ವ್ಯಾ. ಪಾವಗಡದಲ್ಲಿ 1000 ಮೆ.ವ್ಯಾ.ಸಾಮರ್ಥ್ಯ ಹಾಗೂ ರ‍್ಯಾಪ್ಟೆಯಲ್ಲಿ 2000 ಮೆ.ವ್ಯಾ. ಸಾಮರ್ಥ್ಯದ ಬ್ಯಾಟರಿ ಸ್ಟೋರೇಜ್ ಯೋಜನೆಗಳನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.