ಕೊಪ್ಪಳ : ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ರಾಜ್ಯದ ಜನರು 138 ಸ್ಥಾನ ಕೊಟ್ಟಿದ್ದಾರೆ. ಜನರು ನಟ್ಟು, ಬೋಲ್ಟ್ ಸರಿ ಮಾಡಲು ಅಧಿಕಾರ ಕೊಟ್ಟಿದ್ದಾರಾ? ಆ ಕೆಲಸ ಮಾಡಲು ಬೇರೆಯವರು ಇದ್ದಾರೆ. ರಾಜ್ಯದಲ್ಲಿ ಅನೇಕ ಬೆಳವಣಿಗೆ ನಡೆಯುತ್ತಿವೆ. ಇವರಿಗೆ ರಾಜ್ಯದ ಅಭಿವೃದ್ಧಿಯ ಕನಸು ಇಲ್ಲ. ಅಭಿವೃದ್ಧಿಯೊಂದು ಬಿಟ್ಟು ಎಲ್ಲವನ್ನೂ ಮಾತನಾಡುತ್ತಾರೆ ಎಂದು ಗುಡುಗಿದ್ದಾರೆ.
ರಾಜ್ಯದಲ್ಲಿ ಬರೀ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಒಬ್ಬರ ಬಗ್ಗೆ ಮತ್ತೊಬ್ಬರು ಮಾತನಾಡಿಕೊಳ್ಳುತ್ತಿದ್ದಾರೆ. ಇದೊಂದು ಬಿಟ್ಟು ರಾಜ್ಯ ರಾಜಕಾರಣದಲ್ಲಿ ಯಾವ ಬೆಳವಣಿಗೆಯೂ ನಡೆಯುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರುತ್ತಾರೆಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರು ಏನೆಲ್ಲಾ ಆಗುತ್ತಾರೆಂಬುವುದನ್ನು ಕಾಲವೇ ನಿರ್ಧಾರ ಮಾಡುತ್ತದೆ. ಬಿಎಸ್ಪಿಎಲ್ ಕಾರ್ಖಾನೆ ಆರಂಭಕ್ಕೆ ಜನರು ಪರಿಸರ ಹಾನಿಯಾಗುತ್ತಿದೆ ಎನ್ನುತ್ತಾರೆ. ರಾಜ್ಯ ಹಾಗೂ ಕಾರ್ಖಾನೆ ನಡುವೆ ಒಪ್ಪಂದ ಮಾಡಿಕೊಂಡಿರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ. ರಾಜ್ಯ ಸರ್ಕಾರ ಜನರ ಪರವಾಗಿ ಇರಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ. ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಆದರೆ ದುರ್ಬಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಹಲವಾರು ಯೋಜನೆಗಳಲ್ಲಿ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.