ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸೈಟುಗಳ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ ಬಳಿಕ ನಿರುಮ್ಮಳರಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ಇದಕ್ಕೂ ಮೊದಲು ಲೋಕಾಯುಕ್ತ ಬಳಿ ಇರುವ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾವಣೆ ಮಾಡಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್, ಫೆಬ್ರವರಿ 7ರಂದು ತೀರ್ಪು ನೀಡಿತ್ತು. ಲೋಕಾಯುಕ್ತ ತನಿಖೆಗೆ ವಹಿಸುವುದಿಲ್ಲ ಎಂಬುದಾಗಿ ಕೋರ್ಟ್ ಆದೇಶಿಸಿತ್ತು. ಈಗ ಮತ್ತೆ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
“ಮುಡಾದ 14 ಸೈಟುಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಹಾಗಾಗಿ, ನ್ಯಾಯಾಲಯವು ಮರುಪರಿಶೀಲನಾ ಅರ್ಜಿಯನ್ನು ಮನ್ನಿಸಿ, ಸಿಬಿಐ ತನಿಖೆಗೆ ವಹಿಸಬೇಕು” ಎಂಬುದಾಗಿ ಸ್ನೇಹಮಯಿ ಕೃಷ್ಣಾ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮುಡಾ ಸೈಟುಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಾಲಯವು ತನಿಖೆ ನಡೆಸಿದೆ. ತನಿಖೆ ಬಳಿಕ ಬಿ ರಿಪೋರ್ಟ್ ಸಲ್ಲಿಸಿರುವ ಲೋಕಾಯುಕ್ತ ಅಧಿಕಾರಿಗಳು, ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿ.ಎಂ.ಪಾರ್ವತಿ ಅವರ ಪಾತ್ರವಿಲ್ಲ ಎಂದು ತಿಳಿಸಿದೆ.