ನಾಗ್ಪುರ: ಮಹಾರಾಷ್ಟ್ರದಲ್ಲಿರುವ ಮೊಘಲ್ ದೊರೆ ಔರಂಗಜೇಬ್ ಸಮಾಧಿಯನ್ನು ಧ್ವಂಸಗೊಳಿಸಬೇಕು ಎಂಬ ಕೂಗು ಹೆಚ್ಚಾಗುತ್ತಿರುವಂತೆಯೇ, ಸೋಮವಾರ ರಾತ್ರಿ ನಾಗ್ಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಔರಂಗಜೇಬ್ ಸಮಾಧಿ ತೆರವಿಗೆ ಆಗ್ರಹಿಸಿ ಹಿಂದೂ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆ ವೇಳೆ, ಮುಸ್ಲಿಮರ ಧರ್ಮಗ್ರಂಥವನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಯೊಂದು ಹಬ್ಬಿದ್ದೇ ಹಿಂಸಾಚಾರದ ಕಿಡಿ ಹೊತ್ತಲು ಕಾರಣ ಎನ್ನಲಾಗಿದೆ.
ಘಟನೆಯ ಬೆನ್ನಲ್ಲೇ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿದ್ದು, ಕೆಲವು ಕಿಡಿಗೇಡಿಗಳು ಕಲ್ಲೂತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರೂ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಉದ್ರಿಕ್ತ ಗುಂಪು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದೆ.
ತಕ್ಷಣವೇ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಲಾಠಿ ಪ್ರಹಾರ ನಡೆಸಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಡಿಸಿಪಿ ಅರ್ಚಿತ್ ಚಂಡಕ್ ಹೇಳಿದ್ದಾರೆ.
ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 17ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ 15 ಮಂದಿ ಪೊಲೀಸರು ಸೇರಿದಂತೆ 20 ಮಂದಿ ಗಾಯಗೊಂಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ನಾಗ್ಪುರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವದಂತಿಯು ಗುಂಪು ಘರ್ಷಣೆಗೆ ಕಾರಣವಾಗಿದ್ದು, 2 ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ. ಅಲ್ಲದೇ ಅಲ್ಲಿದ್ದ ಅನೇಕ ವಾಹನಗಳಿಗೆ ಬೆಂಕಿ ಹಚ್ಚಿವೆ. ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ.
ವದಂತಿಗಳನ್ನು ನಂಬಬೇಡಿ, ಶಾಂತಿ ಕಾಪಾಡಿ:
ಹಿಂಸಾಚಾರ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಜನರು ಯಾವುದೇ ರೀತಿಯ ವದಂತಿಗಳನ್ನು ನಂಬಬಾರದು. ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದ್ದಾಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾಾರೆ. ನಾಗ್ಪುರ ಶಾಂತಿಪ್ರಿಯ ನಗರವಾಗಿದೆ. ಇಲ್ಲಿ ಅಶಾಂತಿ ಮೂಡಬಾರದು. ಅದಕ್ಕಾಗಿ ಸಾರ್ವಜನಿಕರು ಆಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ನಾಗ್ಪುರ ಸಂಸದರಾದ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೂ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.