ಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 25ರ ವರೆಗೆ ಗುಡುಗು ಸಿಡಿಲಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಅದೇ ರೀತಿ ನಾಳೆಯೂ (ಮಾ.24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ (Karnataka Rain) ಸುರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆ ಇದೆ.
ಮಾ. 24ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಹಾಗೂ ಗುಡುಗು- ಸಿಡಿಲಿನ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮಾ. 25ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಮಾ.26ರಂದು ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾ.27ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮತ್ತೆ ಮಾರ್ಚ್. 28ರಂದು ಮಳೆ ಮಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.