ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ದಿನಾಚರಣೆಗೂ ಮುನ್ನ ಕಾರ್ಮಿಕರಿಗೆ ಬಂಪರ್ ಸಿಹಿ ಸುದ್ದಿ ನೀಡಿದೆ.
ಕಾರ್ಮಿಕರ ದಿನಾಚರಣೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರ ಈ ಸಿಹಿ ಸುದ್ದಿ ಒಂದಿಡೀ ದುಡಿಯುವ ವರ್ಗಕ್ಕೆ ಹಬ್ಬದ ಸಡಗರ-ಸಂಭ್ರಮವನ್ನೇ ಧಾರೆ ಎರೆದಿದೆ.
ಹೌದು! ಮೇ. 1ರಿಂದ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಹೇಳಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವೆಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿ ಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು. ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ ಮಾಡಲಾಗುವುದು ಎಂದು ಹೇಳಿದರು. ಈ ಸುದ್ದಿ ಕೇಳಿ ಕಾರ್ಮಿಕರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ.