ಉಡುಪಿ: ಬೈಂದೂರಿನ ರೋಟರಿ ಭವನದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಿಎಂ ಸಿದ್ದರಾಮಯ್ಯ ಅವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್, ಬಡವರಿಗೆ ಕಡಿಮೆ ದುಡ್ಡಿನಲ್ಲಿ ಪೌಷ್ಟಿಕ ಆಹಾರ ನೀಡುತ್ತಿದೆ. ಐದು ರೂಪಾಯಿಗೆ ತಿಂಡಿ, ಹತ್ತು ರೂಪಾಯಿಗೆ ಮಧ್ಯಾಹ್ನದ ಊಟ ನೀಡಲಾಗುತ್ತಿದೆ. ಇಷ್ಟು ಕಡಿಮೆ ದುಡ್ಡಿನಲ್ಲಿ ಹೊಟ್ಟೆ ತುಂಬಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ. ಇದರೊಂದಿಗೆ ವಿವಿಧ ಸರ್ಕಾರಿ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆದಿದೆ. ಪ್ರತಿಯೊಬ್ಬರೂ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರುಡೇಕರ್, ಬೈಂದೂರು ತಹಸೀಲ್ದಾರ್ ಎಚ್. ರಾಮಚಂದ್ರಪ್ಪ, ಬೈಂದೂರು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಅಜೇಯ ಭಂಡಾರ್ಕಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕಾರ್ಕಳ, ಸದಸ್ಯ ಅರವಿಂದ ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಪ.ಪಂ ನಾಮನಿರ್ದೇಶಿತ ಸದಸ್ಯ ಸದಾಶಿವ ಪಡುವರಿ, ನಾಗರಾಜ ಗಾಣಿಗ ಸೇರಿದಂತೆ ಹಲವರು ಇದ್ದರು.