ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇಲ್ಲಿಯವರೆಗೂ ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈಗ ಮತ್ತೆ ಮೂರು ದಿನಗಳ ನಂತರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 27 ರಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಐದು ದಿನಗಳ ಕಾಲವೂ ಕರಾವಳಿಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನುಳಿದಂತೆ ಮಲೆನಾಡು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.