ಬೆಂಗಳೂರು: ರಾಜ್ಯದ ಕೆಲವೆಡೆ ಮಳೆರಾಯ ಭಾರೀ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದರೆ, ಇನ್ನೂ ಕೆಲವೆಡೆ ಮಳೆ ತಗ್ಗಿದೆ. ಇಂದು ಮತ್ತು ನಾಳೆ ಮತ್ತೆ ಮಳೆಯ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆ ಹೊರತು ಪಡಿಸಿ ಇಂದು ರಾಜ್ಯದ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆ ಹೊರತು ಪಡಿಸಿ ರಾಜ್ಯದಾದ್ಯಂತ ಇಂದು ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಸಂಜೆಯ ನಂತರ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ 7 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ 115 ಮಿ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.