ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ (Arabian Sea)ಗಳಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಾಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಕರಾವಳಿ, ಒಳನಾಡು ಸೇರಿದಂತೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಎರಡೂ ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.