ಮುಡಾ ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ವಿರುದ್ಧ ಸುಪ್ರೀಂಕೋರ್ಟ್ ಕೆಂಡಾಮಂಡಲವಾಗಿದೆ. ರಾಜಕೀಯ ಪ್ರೇರಿತವಾಗಿ ಹೆಜ್ಜೆ ಇಡಬಾರದು. ಇಂತಹ ಸಾಕಷ್ಟು ಅನುಭವಗಳು ನಮಗಾಗಿವೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಏಕಸದಸ್ಯ ಪೀಠ ತರಾಟೆಗೆ ತೆಗೆದುಕೊಂಡಿದೆ.
ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗೆ ಇಡಿ ನೀಡಿದ್ದ ಸಮನ್ಸ್ ನ್ನು ವಜಾಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೇ, ಇಡಿಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಬೈರತಿ ಸುರೇಶ್, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಇಡಿ ವಿರುದ್ಧ ಗುಡುಗಿದ್ದಾರೆ.