ಬೆಂಗಳೂರು : ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ. ಈ ತೀರ್ಪು ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯದ ಪಾಲಿಗೆ ಮಹತ್ವ ಪಡೆದುಕೊಂಡಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ಒಟ್ಟು 4 ಪ್ರಕರಣಗಳು ದಾಖಲಾಗಿವೆ. ಈ 4 ಪ್ರಕರಣಗಳ ಪೈಕಿ ಈಗ ಮೊದಲ ಪ್ರಕರಣದ ತೀರ್ಪು ಇವತ್ತು ಪ್ರಕಟವಾಗಲಿದೆ. ಪ್ರಕರಣ ಸಂಬಂಧ ಈಗಾಗಲೇ ವಾದ- ಪ್ರತಿವಾದ ಅಂತ್ಯಗೊಂಡಿದೆ. ಪ್ರಕರಣದಲ್ಲಿ ಸಾಕ್ಷ್ಯಗಳ ವಿಚಾರಣೆ ಕೂಡ ನ್ಯಾಯಾಲಯ ಆಲಿಸಿದೆ. ಬಳಿಕ ಕಾಯ್ದಿರಿಸಿರುವ ಪ್ರಕರಣದ ತೀರ್ಪನ್ನು ಪ್ರಕಟಿಸಲಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಇಂದು ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರವಾಗಲಿದೆ. ಒಂದು ವೇಳೆ ಅಪರಾಧಿ ಎಂದು ತೀರ್ಪು ನೀಡಿದರೆ, ಅವರಿಗೆ ದೊಡ್ಡ ಹಿನ್ನಡೆಯಾಗಲಿದೆ. ತೀರ್ಪು ಬಳಿಕ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಬೇಕಾಗುತ್ತದೆ. ಅಂದರೆ ಶಿಕ್ಷೆಯ ಪ್ರಮಾಣದ ಬಗ್ಗೆಯೂ ನ್ಯಾಯಾಲಯ ವಾದ- ಪ್ರತಿವಾದವನ್ನು ಆಲಿಸಲಿದೆ. ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರ ವಾದ ಮಂಡಿಸಲಿದ್ದಾರೆ. ಕಡಿಮೆ ಶಿಕ್ಷೆ ನೀಡಿ ಎಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಮನವಿ ಮಾಡುವ ಸಾಧ್ಯತೆ ಇದೆ.