ಮುಂಬೈ: 2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೇಗಾಂವ್‌ನಲ್ಲಿ ನಡೆದ ಭೀಕರ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 17 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ, ಇಂದು ಮುಂಬೈನಲ್ಲಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನ್ಯಾಯಾಲಯವು ಪ್ರಕರಣದ ಎಲ್ಲ 8 ಆರೋಪಿಗಳನ್ನು ಸಂಪೂರ್ಣವಾಗಿ ನಿರ್ದೋಷಿ ಎಂದು ಘೋಷಿಸಿದೆ. ಆರೋಪಿಗಳ ವಿರುದ್ಧ ಯಾವುದೇ ಸಮರ್ಪಕ ಸಾಕ್ಷ್ಯಗಳು ಲಭ್ಯವಿಲ್ಲ ಎಂದು ಹೇಳಿ ಎಲ್ಲರನ್ನೂ ಖುಲಾಸೆಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ.
ರಂಜಾನ್ ಮಾಸದಲ್ಲಿ ಮಾಲೇಗಾಂವ್‌ನ ಭಿಕ್ಕು ಚೌಕ್ ಬಳಿ ಸಂಭವಿಸಿದ ಈ ಸ್ಫೋಟದಲ್ಲಿ 6 ಮಂದಿ ಸಾವನ್ನಪ್ಪಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಸೇನೆಯಲ್ಲಿದ್ದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಂಟು ಮಂದಿಯನ್ನು ಪ್ರಮುಖ ಆರೋಪಿಗಳನ್ನಾಗಿ ಹೆಸರಿಸಲಾಗಿತ್ತು. ಇತರ ಆರೋಪಿಗಳಲ್ಲಿ ಮೇಜರ್ (ನಿವೃತ್ತ) ರಮೇಶ್ ಉಪಾಧ್ಯಾಯ, ಅಜಯ್ ರಹಿರ್ಕರ್, ಸುಧಾಕರ್ ದ್ವಿವೇದಿ, ಸುಧಾಕರ್ ಚತುರ್ವೇದಿ, ಸಮೀರ್ ಕುಲಕರ್ಣಿ ಸೇರಿದ್ದಾರೆ.
ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ನಡೆಸಿತ್ತು. ನಂತರ 2011ರಲ್ಲಿ ಇದನ್ನು ಎನ್‌ಐಎಗೆ ಹಸ್ತಾಂತರಿಸಲಾಯಿತು. ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ಕೆ. ಲಾಹೋತಿ ಅವರು ತೀರ್ಪಿನಲ್ಲಿ, “ಕೇವಲ ಶಂಕೆಯಿಂದ ಪ್ರಕರಣವನ್ನು ಮುಂದುವರಿಸಲು ಸಾಧ್ಯವಿಲ್ಲ. ಆರೋಪಿಗಳ ವಿರುದ್ಧದ ಆರೋಪಗಳನ್ನು ಸಾಬೀತುಪಡಿಸಲು ಅಗತ್ಯವಿರುವ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಒದಗಿಸಿಲ್ಲವಾದ್ದರಿಂದ, ಎಲ್ಲರನ್ನೂ ಖುಲಾಸೆಗೊಳಿಸಲಾಗುತ್ತಿದೆ” ಎಂದು ಸ್ಪಷ್ಟಪಡಿಸಿದರು.
ನ್ಯಾಯಾಲಯವು ಬಾಂಬ್ ಸ್ಫೋಟ ಸಂಭವಿಸಿದ್ದನ್ನು ಗಮನಿಸಿದೆ. ಆದರೆ, ಸ್ಫೋಟಕ್ಕೆ ಬಳಸಲಾದ ಬೈಕ್ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರಿಗೆ ಸೇರಿದ್ದು ಎಂಬುದಕ್ಕೆ ಯಾವುದೇ ದೃಢವಾದ ಸಾಕ್ಷ್ಯ ಲಭ್ಯವಾಗಿಲ್ಲ ಎಂದು ಹೇಳಿದೆ. ಹಾಗೆಯೇ, ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅವರ ಮನೆಯಲ್ಲಿ ಆರ್‌ಡಿಎಕ್ಸ್ ಸಂಗ್ರಹಿಸಲಾಗಿತ್ತು ಅಥವಾ ಅವರು ಬಾಂಬ್ ತಯಾರಿಕೆಯಲ್ಲಿ ಭಾಗಿಯಾಗಿದ್ದರು ಎಂಬುದಕ್ಕೂ ಯಾವುದೇ ಸಮರ್ಪಕ ದಾಖಲೆಗಳು ಇಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಒಟ್ಟಾರೆ, ಯಾವುದೇ ಆರೋಪಿಯು ಸ್ಫೋಟಕ್ಕೆ ನೇರವಾಗಿ ಹೊಣೆಗಾರನಾಗಿದ್ದಾನೆ ಎಂಬುದನ್ನು ತೋರಿಸುವ ಸಾಕ್ಷ್ಯಗಳನ್ನು ಪ್ರಾಸಿಕ್ಯೂಷನ್ ಒದಗಿಸುವಲ್ಲಿ ವಿಫಲವಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಈ ಪ್ರಕರಣದ ಎಲ್ಲ ಆರೋಪಿಗಳು ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದಾರೆ. ಇದೇ ವೇಳೆ ನ್ಯಾಯಾಲಯವು ಸ್ಫೋಟದ ಸಂತ್ರಸ್ತ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ನೀಡುವಂತೆ ಸೂಚನೆ ನೀಡಿದೆ. ಮಾಲೇಗಾಂವ್ ಸ್ಫೋಟ ಪ್ರಕರಣವು ರಾಷ್ಟ್ರಮಟ್ಟದಲ್ಲಿ ತೀವ್ರ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿತ್ತು.



















