ಗೊಂಡಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ದುರ್ಮರಣಕ್ಕೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಸರಯೂ ಕಾಲುವೆಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ.
ಇಟಿಯಾಥೋಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಸಿಹಗಾಂವ್ ಗ್ರಾಮದ 15 ಮಂದಿ ಪ್ರಯಾಣಿಕರು ಖರ್ಗುಪುರದ ಪೃಥ್ವಿನಾಥ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳುತ್ತಿದ್ದರು. ಬೆಲ್ವಾ ಬಹುತಾ ಗ್ರಾಮದ ಬಳಿ ಬರುತ್ತಿದ್ದಂತೆ, ಮಳೆಯಿಂದಾಗಿ ರಸ್ತೆ ಜಾರುತ್ತಿದ್ದ ಕಾರಣ ಚಾಲಕ ಬ್ರೇಕ್ ಹಾಕಿದಾಗ ವಾಹನವು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಕಾಲುವೆಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಮೂವರು ಮಕ್ಕಳು, ಆರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಮತ್ತು ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ವಾಹನದಲ್ಲಿದ್ದ ನಾಲ್ವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಈ ದುರಂತದ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೂ ಸಹ ಈ ಘಟನೆಗೆ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ₹50,000 ಪರಿಹಾರವನ್ನು ಘೋಷಿಸಿದ್ದಾರೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



















