ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆ ಹಾವಳಿ ಮತ್ತೆ ಮುಂದುವರೆದಿದೆ. ಮನೆಯ ಮುಂದೆ ನಿಂತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಫಿಲಿಪ್ (65) ಗಾಯಗೊಂಡ ರೈತ. ರಾತ್ರಿ ಮನೆಯಿಂದ ಹೊರ ಬಂದಾಗ ಕಾಡಾನೆ ದಾಳಿ ಮಾಡಿದೆ. ಘಟನೆಯಲ್ಲಿ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ರೈತ ಫಿಲಿಪ್‌ರನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೇಲೂರು, ಸಕಲೇಶಪುರ ಭಾಗದಿಂದ 35 ಕಾಡಾನೆಗಳು ಬಂದಿದ್ದು, ಕೃಷ್ಣಾಪುರ ಗ್ರಾಮದ ಕಾಫಿ ತೋಟದಲ್ಲಿ ಬೀಡು ಬಿಟ್ಟಿವೆ. ನಿರಂತರವಾಗಿ ವಸತಿ ಪ್ರದೇಶದಲ್ಲಿ ಕಾಡಾನೆಗಳ ಹಿಂಡು ಸಂಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಾನೆಗಳ ಸೆರೆಗೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.



















