ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಆರಂಭವಾದ ಮೊದಲ ದಿನವೇ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.
ಈ ಸಂಬಂಧಿಸಿದಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ಜೆ. ರವಿಶಂಕರ್ ಅವರಿಗೆ ತೇಜಸ್ವಿ ಸೂರ್ಯ ಪತ್ರ ಬರೆದಿದ್ದಾರೆ.
ನಮ್ಮ ಮೆಟ್ರೊ ‘ಹಸಿರು ಮಾರ್ಗ’ (ರೇಷ್ಮೆ ಸಂಸ್ಥೆ ಹಾಗೂ ಮಾದಾವರ)ದಲ್ಲಿ ಪ್ರತಿ 4 ರಿಂದ 8 ನಿಮಿಷಕ್ಕೊಂದು ರೈಲು ಸಂಚರಿಸುತ್ತದೆ. ‘ಹಳದಿ ಮಾರ್ಗ’ದಲ್ಲಿ ಸದ್ಯ ಪ್ರತಿ 25 ನಿಮಿಷಕ್ಕೊಂದು ರೈಲು ಸಂಚಾರ ಮಾಡುತ್ತಿರುವುದರಿಂದ ಎರಡೂ ಮಾರ್ಗಗಳು ಸೇರುವ ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಗುತ್ತಿದೆ.
ಹಳದಿ ಮತ್ತು ಹಸಿರು ಮಾರ್ಗದ ಇಂಟರ್‌ಚೇಂಜ್ ನಿಲ್ದಾಣವಾದ ಆರ್.ವಿ. ರಸ್ತೆ ಮೆಟ್ರೊ ನಿಲ್ದಾಣದಲ್ಲಿ ದಟ್ಟಣೆ ಹೆಚ್ಚಿರಲಿದೆ. ಸದ್ಯ ‘ಹಳದಿ ಮಾರ್ಗ’ದಲ್ಲಿ ಕೇವಲ ಮೂರು ರೈಲುಗಳು ಸಂಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಆ ಸಂಖ್ಯೆ ಹೆಚ್ಚಾಗಲಿದೆ. ಅಲ್ಲಿಯವರೆಗೆ ಜನದಟ್ಟಣೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ‘ಹಳದಿ ಮಾರ್ಗ’ದ ಮೆಟ್ರೊ ನಿಲ್ದಾಣಗಳಲ್ಲಿ ಈ ಕೂಡಲೇ ಪ್ಲಾಟ್‌ಫಾರ್ಮ್ ಸ್ಕ್ರೀನ್ ಡೋರ್ ಅಥವಾ ಬ್ಯಾರಿಕೇಡ್‌ಗಳನ್ನು ಅಳವಡಿಸಬೇಕು ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.


















