ನವದೆಹಲಿ: ಕೊನೆಗೂ ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯ ಹೆಸರು ಅಂತಿಮವಾಗಿದೆ. ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ (CP Radhakrishnan) ಅಭ್ಯರ್ಥಿಯನ್ನಾಗಿ ಎನ್ ಡಿಎ ಘೋಷಿಸಿದೆ.
ಬಿಜೆಪಿ (BJP) ಪ್ರಧಾನ ಕಚೇರಿಯಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಸಿಪಿ ರಾಧಾಕೃಷ್ಣನ್ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ.
ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ 2024ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದಕ್ಕೂ ಮುನ್ನ ಜಾರ್ಖಂಡ್, ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಕರ್ತವ್ಯ ನಿರ್ವಹಿಸಿದ್ದಾರೆ. 1998 ಮತ್ತು 1999 ರಲ್ಲಿ ಎರಡು ಬಾರಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಸಂಸದರಾಗಿದ್ದಾಗ ಅವರು ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು. ರಾಧಾಕೃಷ್ಣನ್ 16ನೇ ವಯಸ್ಸಿನಿಂದಲೇ ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಜನಸಂಘದೊಂದಿಗೆ ಸಂಬಂಧ ಹೊಂದಿದ್ದಾರೆ. ಸೆ. 9ರಂದು ಉಪರಾಷ್ಟ್ರಪತಿಯ ನೇಮಕದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ.



















