ಬೆಂಗಳೂರು : ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ನಿಷೇಧಕ್ಕಾಗಿ ಕೇಂದ್ರ ಸರಕಾರ ರೂಪಿಸಿರುವ ‘ಆನ್‌ಲೈನ್ ಗೇಮಿಂಗ್ (ಉತ್ತೇಜನ ಮತ್ತು ನಿಯಂತ್ರಣ) ಕಾಯ್ದೆ’ಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಕೇಂದ್ರ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ನವದೆಹಲಿಯಲ್ಲಿ ನೋಂದಾಯಿತ ಕಚೇರಿ ಹೊಂದಿರುವ ‘ಹೆಡ್ ಡಿಜಿಟಲ್ ವರ್ಕ್ಸ್ ಪ್ರೈವೇಟ್ ಲಿಮಿಟೆಡ್’ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು (ಶನಿವಾರ) ವಿಚಾರಣೆ ಮಾಡಿತ್ತು.
ಕೆಲವು ಕಾಲ ಅರ್ಜಿದಾರರ ಪರ ಹಿರಿಯ ವಕೀಲ ಆರ್ಯಂ ಸುಂದರಮ್ ಮತ್ತು ಕೇಂದ್ರ ಸರಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ವಿದ್ಯುನ್ಮಾನ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಸೆ.08ಕ್ಕೆ ಮುಂದೂಡಿ ಆದೇಶಿಸಿತ್ತು.
ಕಾಯ್ದೆಯ ಸೆಕ್ಷನ್‌ಗಳಾದ 2(1)(G), 5, 6, 7 ಹಾಗೂ 9ಕ್ಕೆ ತಡೆ ನೀಡಬೇಕು. ಅರ್ಜಿದಾರರ ವಿರುದ್ಧ ಯಾವುದೇ ದಂಡನೀಯ ಕ್ರಮಕೈಗೊಳ್ಳದಂತೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಗೆ ಸಂಬಂಧಿಸಿದಂತೆ ಅರ್ಜಿಯ ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರಕಾರ ಆಕ್ಷೇಪಣೆ ಸಲ್ಲಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿತು.