ಮಂಗಳೂರು (ಧರ್ಮಸ್ಥಳ) : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಇಂದು(ಸೋಮವಾರ) ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ.
ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ನೇತೃತ್ವದ ಬಿಜೆಪಿ ನಾಯಕರ ತಂಡ ಧರ್ಮಸ್ಥಳ ಕ್ಷೇತ್ರದ ಮಂಜುನಾಥ ಸ್ವಾಮಿ ದರ್ಶನ ಪಡೆದು, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ನೀಡಿ ನೈತಿಕ ಬೆಂಬಲ ಸೂಚಿಸಿದೆ.
ಮಾತ್ರವಲ್ಲದೇ, ಇಂದು ಧರ್ಮಸ್ಥಳದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ 1 ಲಕ್ಷ ಜನ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಮಧ್ಯಾಹ್ನ 2 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ. ದೇವಸ್ಥಾನದ ಹೊರವಲಯದಲ್ಲಿರುವ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಭಾಗಿಯಾಗಲಿದ್ದಾರೆ.
ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಆರ್ ಅಶೊಕ್ ಭಾಗವಹಿಸಲಿದ್ದಾರೆ. 2 ಸಾವಿರ ಬಸ್ ಗಳಲ್ಲಿ 10,000 ಕ್ಕೂಅಧಿಕ ಕಾರುಗಳಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಆಗಮಿಸಲಿದ್ದಾರೆ.
ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳ ವರದಿಗಾರರಿಗೆ ಪ್ರತಿಕ್ರಿಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಪ್ರಕರಣಕ್ಕೆ ಸಂಬಂಧಸಿದಂತೆ ಸತ್ಯಾಸತ್ಯತೆ ಹೊರಬರಬೇಕೆಂದರೇ, ಪ್ರಕರಣವನ್ನು ಎನ್.ಐ.ಎ ಹಾಗೂ ಸಿಬಿಐ ಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
