ಬೈಂದೂರು ವಲಯದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಪಟ್ಟಣದ ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ನಡೆಯಿತು.
ಶಾಸಕ ಗುರುರಾಜ ಗಂಟೆಹೊಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಾಗೂ ಖಾಸಗಿ ಶಾಲೆಗಳ ಗುಣಮಟ್ಟದ ಶಿಕ್ಷಣದ ವ್ಯವಸ್ಥೆಯ ಮಧ್ಯೆಯೂ ಹಲವು ಸರ್ಕಾರಿ ಶಾಲೆಯ ಶಿಕ್ಷಕರು ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಫಲಿತಾಂಶದಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಶಾಲೆಗಳ ಅಭಿವೃದ್ಧಿಗೆ ಅವರು ಪಡುತ್ತಿರುವ ಪ್ರಾಮಾಣಿಕ ಪ್ರಯತ್ನ ನಿಜವಾಗಿಯೂ ಶ್ಲಾಘನೀಯ. ಅವರಿಂದಾಗಿಯೇ ಸರ್ಕಾರಿ ಶಾಲೆಗಳು ಉಳಿದಿವೆ ಎಂದು ಶ್ಲಾಘಿಸಿದ್ದಾರೆ.

ಕೇತ್ರ ಶಿಕ್ಷಣಾಧಿಕಾರಿ ನಾಗೇಶ್ ಕೆ. ನಾಯಕ್ ಮಾತನಾಡಿ, ಒಬ್ಬ ಉತ್ತಮ ಶಿಕ್ಷಕನು ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣನಾಗುತ್ತಾನೆ” ಎಂದು ಹಾಡಿ ಹೊಗಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಮಾಹಿತಿ ಹಕ್ಕುಗಳ ಮೂಲಕ ಸರ್ಕಾರಿ ನೌಕರರಿಗೆ ತೊಂದರೆ ಕೊಟ್ಟರೆ ಅದನ್ನು ಎಂದಿಗೂ ಸಹಿಸುವುದಿಲ್ಲ. ಸರ್ಕಾರಿ ನೌಕರರ ಕುಂದು ಕೊರತೆಗಳನ್ನು ಸರ್ಕಾರಗಳು ಈಡೇರಿಸುತ್ತಿರಬೇಕು ಎಂದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಅಲ್ಲದೇ, ಬೈಂದೂರು ವಲಯದ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗಾಗಿ ನಡೆದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ತಹಶೀಲ್ದಾರ್ ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಫಿಲಿಪ್ ನೆಲ್ಲಿವಿಲ್ಲಾ, ತಾಲೂಕು ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ವಿಜಯಕುಮಾರ್ ಶೆಟ್ಟಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಯಾನಂದ ಪಟಗಾರ್, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷೆ ಸಾರಿಕಾ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಭಡ್ತಿ ಹೊಂದಿದ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೇಶವ ನಾಯಕ್, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ ದೇವಾಡಿಗ, ರತ್ತುಬಾಯಿ ಜನತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಆನಂದ ಮದ್ದೋಡಿ, ಪ್ರಭಾರ ಸಮನ್ವಯ ಅಧಿಕಾರಿ ಪ್ರದೀಪ್ ಕುಮಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಂಜುನಾಥ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ರಾಮಕೃಷ್ಣ ದೇವಾಡಿಗ ಸೇರಿದಂತೆ ಹಲವರು ಇದ್ದರು.