ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಬಂಧಿತರು ಮುಸ್ಲಿಂ ಸಮುದಾಯದವರು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ಹೇಳಿದ್ದಾರೆ.
ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ವಿರೋಧ ಪಕ್ಷಗಳು ಬಳಕೆ ಮಾಡಿಕೊಳ್ಳಲು ಮುಂದಾಗುತ್ತಿವೆ. ಹಿಂದೂಗಳ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ನೀಡುವುದು ಸರಿಯಲ್ಲ.
ಇದರ ಹಿಂದೆ ಯಾರಿದ್ದಾರೆ ಎಂಬ ಕುರಿತು ತನಿಖೆ ನಡೆಯುತ್ತಿದೆ. ಯಾರೇ ಇದ್ದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಸರ್ಕಾರ ಯಾರ ಓಲೈಕೆಯನ್ನೂ ಮಾಡುತ್ತಿಲ್ಲ. ಈಗಾಗಲೇ 21 ಜನರನ್ನು ಬಂಧಿಸಿರುವುದೇ ಇದಕ್ಕೆ ಸಾಕ್ಷಿ. ಇದು ಪೂರ್ವನಿಯೋಜಿತವಾಗಿ ನಡೆದಿದೆ. ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ. ಅಶೋಕ್ ಸೇರಿದಂತೆ ಬಿಜೆಪಿ ನಾಯಕರ ಕುಮ್ಮಕ್ಕಿನಿಂದ ಇದೆಲ್ಲ ಆಗುತ್ತಿದೆ. ನನಗೂ ಕೆಲವು ಸಂಘಟನೆಗಳ ಮುಖಂಡರು ಕರೆ ಮಾಡಿ ಮಾತನಾಡಿದ್ದಾರೆ. ಆದರೆ, ಹೆಸರು ಹೇಳಲು ಬಯಸುವುದಿಲ್ಲ ಎಂದು ಆರೋಪಿಸಿದ್ದಾರೆ.
ವಿಧಾನಸಭೆಯಲ್ಲಿ ಅವರಿಗೆ ನಮ್ಮನ್ನು ಎದುರಿಸಲು ಆಗುತ್ತಿಲ್ಲ. ನಮ್ಮ ವಿರುದ್ಧ ಆರೋಪ ಮಾಡಲು ಅವರಿಗೆ ಯಾವುದೇ ವಿಷಯ ಇಲ್ಲ. ಹೀಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದಿದ್ದಾರೆ. ಅಲ್ಲದೇ, ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ತಪ್ಪಿತಸ್ಥರ ವಿರುದ್ಧ ಕಠಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಕಲ್ಲು ತೂರಾಟ ನಡೆದಿರುವುದು ವಿಷಾದನೀಯ.
ಈ ಬಗ್ಗೆ ಸಮರ್ಪಕ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಇನ್ನು ಮುಂದೆ ಇಂತಹ ದುರ್ವರ್ತನೆ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲು ತಿಳಿಸಲಾಗಿದೆ. ಸಾರ್ವಜನಿಕರು ಈ ದಿಶೆಯಲ್ಲಿ ಸಹಕರಿಸಬೇಕು ಹಾಗೂ ಇಂತಹ ಯಾವುದೇ ರೀತಿಯ ಅಹಿತಕರ ಘಟನೆಗೆ ಎಡೆ ಮಾಡಿಕೊಡಬಾರದು ಎಂದು ಮನವಿ ಮಾಡಿದ್ದಾರೆ.



















