ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಸಾಹಸ ಸಿಂಹ ಖ್ಯಾತಿಯ ವಿಷ್ಣುವರ್ಧನ್ ಹಾಗೂ ಖ್ಯಾತ ನಟಿ ಬಿ. ಸರೋಜಾದೇವಿ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲಾಗುವುದು ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ ತಿಳಿಸಿದ್ದಾರೆ.
ಇಂದು (ಗುರುವಾರ) ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಈ ಮಾಹಿತಿ ನೀಡಿದರು.
ವಿಷ್ಣುವರ್ಧನ್ ಸ್ಮಾರಕಕ್ಕೆ ಜಮೀನು ನೀಡಬೇಕು ಎಂದು ಅವರ ಅಭಿಮಾನಿಗಳು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದರು. ಸಿನೆಮಾ ರಂಗದ ಗಣ್ಯರು ಕೂಡ ಒತ್ತಾಯಿಸಿದ್ದರು. ಆದರೆ ಈ ಬಗ್ಗೆ ಸಭೆಯಲ್ಲಿ ಚರ್ಚೆಯಾಗಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.
ಇದೇ ವೇಳೆ ರಾಷ್ಟ್ರಕವಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ತೀರ್ಮಾನಿಸಿದ್ದಾಗಿಯೂ ಅವರು ಹೇಳಿದರು.



















