ನವದೆಹಲಿ: ನಾಡಹಬ್ಬ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ನಂತರ, ಈಗ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸೆಪ್ಟೆಂಬರ್ 22ರಂದು ದಸರಾ ಉದ್ಘಾಟನಾ ಸಮಾರಂಭ ನಿಗದಿಯಾಗಿರುವುದರಿಂದ, ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದ್ದು, ಶುಕ್ರವಾರ ವಿಚಾರಣೆ ನಡೆಸಲಿದೆ.

ಕರ್ನಾಟಕ ಸರ್ಕಾರವು 2025ರ ಮೈಸೂರು ದಸರಾವನ್ನು ಉದ್ಘಾಟಿಸಲು ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ಕರ್ನಾಟಕ ಹೈಕೋರ್ಟ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್) ಸಲ್ಲಿಕೆಯಾಗಿದ್ದವು.
ಅರ್ಜಿದಾರರ ವಾದವೇನು?
ಬಾನು ಮುಷ್ತಾಕ್ ಅವರು ಈ ಹಿಂದೆ “ಹಿಂದೂ ವಿರೋಧಿ” ಹೇಳಿಕೆಗಳನ್ನು ನೀಡಿದ್ದಾರೆ. ಆದ್ದರಿಂದ, ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಜನರ ಭಾವನೆಗಳಿಗೆ ಧಕ್ಕೆ ತರುತ್ತದೆ. ಅಲ್ಲದೆ, ಹಿಂದೂ ಧಾರ್ಮಿಕ ಆಚರಣೆಗಳನ್ನು ಒಳಗೊಂಡಿರುವ ಕಾರ್ಯಕ್ರಮವನ್ನು ಅನ್ಯ ಧರ್ಮದವರು ಉದ್ಘಾಟಿಸುವುದು ಸಂವಿಧಾನದ 25 ಮತ್ತು 26ನೇ ವಿಧಿಗಳ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.
ಸೆಪ್ಟೆಂಬರ್ 15 ರಂದು ಅರ್ಜಿಗಳ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಾಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತ್ತು. ಅಲ್ಲದೆ “ಬಾನು ಮುಷ್ತಾಕ್ ಒಬ್ಬ ಸಾಧಕಿ. ಅವರು ಲೇಖಕಿ, ವಕೀಲೆ, ಸಾಮಾಜಿಕ ಕಾರ್ಯಕರ್ತೆ ಮತ್ತು ಬೂಕರ್ ಪ್ರಶಸ್ತಿ ವಿಜೇತೆ. ಈ ಹಿಂದೆ ವಿಜ್ಞಾನಿಗಳು, ಶಿಕ್ಷಣ ತಜ್ಞರು, ಸ್ವಾತಂತ್ರ್ಯ ಹೋರಾಟಗಾರರು ದಸರಾವನ್ನು ಉದ್ಘಾಟಿಸಿದ್ದಾರೆ. ರಾಜ್ಯ ಸರ್ಕಾರವು ಪ್ರತಿ ವರ್ಷ ಸಾಧಕರನ್ನು ಆಹ್ವಾನಿಸುವುದು ಸಂಪ್ರದಾಯವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
“ಬೇರೆ ಧರ್ಮದ ಹಬ್ಬಗಳ ಆಚರಣೆಯಲ್ಲಿ ನಿರ್ದಿಷ್ಟ ಧರ್ಮದ ವ್ಯಕ್ತಿಯ ಭಾಗವಹಿಸುವಿಕೆಯು ಸಂವಿಧಾನದ ಅಡಿಯಲ್ಲಿ ಲಭ್ಯವಿರುವ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ. ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿಲ್ಲ,” ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.
ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮುಂದೆ ತುರ್ತು ವಿಚಾರಣೆಗೆ ಮನವಿ ಮಾಡಲಾಯಿತು. ಮನವಿಯನ್ನು ಪುರಸ್ಕರಿಸಿದ ನ್ಯಾಯಪೀಠ, ಶುಕ್ರವಾರ (ಸೆಪ್ಟೆಂಬರ್ 19) ಪ್ರಕರಣದ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.