ನವದೆಹಲಿ: ಡಿಎಂಕೆ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರ ಪ್ರತಿಮೆಯನ್ನು ಸ್ಥಾಪಿಸಲು ಸಾರ್ವಜನಿಕರ ಹಣವನ್ನು ಬಳಸುವ ತಮಿಳುನಾಡು ಸರ್ಕಾರದ ಯೋಜನೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. “ನಿಮ್ಮ ನಾಯಕರನ್ನು ವೈಭವೀಕರಿಸಲು ಸಾರ್ವಜನಿಕರ ಹಣವನ್ನು ಏಕೆ ಬಳಸುತ್ತಿದ್ದೀರಿ?” ಎಂದು ಪ್ರಶ್ನಿಸುವ ಮೂಲಕ ತಮಿಳುನಾಡು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠ, “ಇದಕ್ಕೆ ಅನುಮತಿ ನೀಡಲ್ಲ” ಎಂದು ಖಾರವಾಗಿ ಹೇಳಿದೆ.

ತಿರುನಲ್ವೇಲಿ ಜಿಲ್ಲೆಯ ವಲ್ಲಿಯೂರ್ ದೈನಂದಿನ ತರಕಾರಿ ಮಾರುಕಟ್ಟೆಯ ಪ್ರವೇಶ ದ್ವಾರದಲ್ಲಿ ಕರುಣಾನಿಧಿ ಅವರ ಕಂಚಿನ ಪ್ರತಿಮೆ ಸ್ಥಾಪಿಸಲು ಅನುಮತಿ ಕೋರಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿಯನ್ನು ಹಿಂಪಡೆದು ಮದ್ರಾಸ್ ಹೈಕೋರ್ಟ್ ಅನ್ನು ಸಂಪರ್ಕಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಈ ಹಿಂದೆ, ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಸ್ಥಾಪಿಸುವುದನ್ನು ಮದ್ರಾಸ್ ಹೈಕೋರ್ಟ್ ನಿಷೇಧಿಸಿತ್ತು. ಇಂತಹ ಪ್ರತಿಮೆ ಸ್ಥಾಪನೆಯು ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ ಮತ್ತು ಸಾರ್ವಜನಿಕರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ನಾಗರಿಕರ ಹಕ್ಕುಗಳನ್ನು ರಕ್ಷಿಸಬೇಕಾದದ್ದು ಸರ್ಕಾರದ ಕರ್ತವ್ಯವಾಗಿದ್ದು, ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರವು ಪ್ರತಿಮೆ ಸ್ಥಾಪನೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಸಹ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ್ದು, ಸಾರ್ವಜನಿಕರ ಹಣವನ್ನು ರಾಜಕೀಯ ನಾಯಕರ ಸ್ಮಾರಕಗಳಿಗೆ ಬಳಸುವ ಕುರಿತ ಚರ್ಚೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.