ಬೆಂಗಳೂರು: ಖ್ಯಾತ ಕಾದಂಬರಿಕಾರ ಎಸ್.ಎಲ್.ಭೈರಪ್ಪ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ನಾಡಿನ ಸಾಕ್ಷಿ ಪ್ರಜ್ಞೆಯಂತಿದ್ದ ಅದ್ವಿತೀಯ ಸಾಹಿತಿ, ಕನ್ನಡ ಸಾರಸ್ವತ ಲೋಕಕ್ಕೆ ‘ಸರಸ್ವತಿ ಸಮ್ಮಾನ್’ ಗೌರವವನ್ನು ತಂದುಕೊಟ್ಟ, ಪದ್ಮಭೂಷಣ ಡಾ|| ಎಸ್.ಎಲ್.ಭೈರಪ್ಪನವರು ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ಆಘಾತವಾಗಿದೆ. ಕನ್ನಡ ಸಾಹಿತ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ, ದೇಶ ವಿದೇಶಗಳ ಸಾಹಿತ್ಯಾಸಕ್ತರ ನೆಚ್ಚಿನ ಸಾಹಿತಿಗಳಾಗಿದ್ದ, ಆ ಹಿರಿಯ ಸಾಹಿತಿಯನ್ನು ಕಳೆದುಕೊಂಡು ಕನ್ನಡ ನಾಡು, ನುಡಿ ಅನಾಥವಾದಂತಾಗಿದೆ, ಒಬ್ಬ ದಿಗ್ಗಜ ಸಾಹಿತಿಯನ್ನು, ಸಾಧಕ ಶ್ರೇಷ್ಠರನ್ನು ನಾವು ಕಳೆದುಕೊಂಡಿದ್ದೇವೆ. ಆ ದಿವ್ಯ, ಸಾರಸ್ವತ ಚೇತನಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಡಾ.ಭೈರಪ್ಪನವರು ತಮ್ಮ ಅಗಾಧ ಪಾಂಡಿತ್ಯಪೂರ್ಣ ಕಾದಂಬರಿಗಳ ಮೂಲಕ ಭಾರತೀಯ ಸಂಸ್ಕೃತಿ, ಇತಿಹಾಸ, ತತ್ವಶಾಸ್ತ್ರ ಮತ್ತು ಮಾನವ ಸಂಬಂಧಗಳನ್ನು ಅತ್ಯಂತ ಆಳವಾಗಿ ವಿಶ್ಲೇಷಿಸುವ ಅಪೂರ್ವ ಕೃತಿಗಳನ್ನು ರಚಿಸಿ, ನಾಡಿನ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ವಂಶವೃಕ್ಷ, ಪರ್ವ, ಸಾರ್ಥ, ಆವರಣದಂತಹ ಕೃತಿಗಳು ಕನ್ನಡ ಸಾಹಿತ್ಯಕ್ಕೆ ಒಂದು ಹೊಸ ದಿಕ್ಕನ್ನೇ ನೀಡಿವೆ. ಅಗಲಿದ ಮಹಾನ್ ಚೇತನಕ್ಕೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತಾ, ಅವರ ಕುಟುಂಬದವರಿಗೆ, ಅಪಾರ ಅಭಿಮಾನಿಗಳಿಗೆ ಆ ಮೇರು ವ್ಯಕ್ತಿತ್ವದ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ ಸಂತಾಪ ಸೂಚಿಸಿದ್ದಾರೆ.