ಬೆಂಗಳೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಓದುತ್ತಿರುವ 9-12ನೇ ತರಗತಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ 12 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ.
ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1 ಸಾವಿರ ರೂಪಾಯಿಯಂತೆ ಒಂದು ವರ್ಷದ ಅವಧಿಯಲ್ಲಿ ಒಟ್ಟು 12 ಸಾವಿರ ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂದು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಸ್ಕಾಲರ್ ಶಿಪ್ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ.
“ಷರತ್ತುಗಳು ಏನೇನು”?
• ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 3,50,000 ರೂ. ಮೀರಿರಬಾರದು.
• ಬೇರೆ ಯಾವುದೇ ಕೇಂದ್ರ ಸರ್ಕಾರದ ವಿದ್ಯಾರ್ಥಿವೇತನ ಪಡೆಯುತ್ತಿರಬಾರದು.
• ಅಧ್ಯಯನ ಮಾಡುತ್ತಿರುವುದಕ್ಕಿಂತ ಹಿಂದಿನ ವರ್ಷದಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು.
• ಸರ್ಕಾರಿ, ಸರ್ಕಾರಿ ಅನುದಾನಿತ ಅಥವಾ ಸ್ಥಳೀಯ ಸಂಸ್ಥೆಗಳ ಶಾಲೆಯಲ್ಲಿ ಓದುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರು.
“ಸಲ್ಲಿಸಬೇಕಾದ ದಾಖಲೆಗಳು ಯಾವವು”?
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಹಲವು ದಾಖಲೆಗಳನ್ನು ನೀಡಬೇಕು. ಎರಡು ಪಾಸ್ ಪೋರ್ಟ್ ಸೈಜಿನ ಫೋಟೋಗಳು, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ವಿಳಾಸದ ಪುರಾವೆ ಹಾಗೂ ಆಧಾರ್ ಕಾರ್ಡ್ ಗಳನ್ನು ನೀಡಬೇಕು. ಅರ್ಹ ವಿದ್ಯಾರ್ಥಿಗಳು https://scholarships.gov.in/ ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.