ಮುಂಬೈ: ಭಾರತದಲ್ಲಿ ಕ್ಯಾಂಪಸ್ ತೆರೆಯಲು ಯುಕೆಯ 9 ವಿಶ್ವವಿದ್ಯಾಲಯಗಳು ಸಿದ್ಧವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಜತೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದು, ಸೌತ್ ಹ್ಯಾಂಪ್ಟನ್ ಯೂನಿವರ್ಸಿಟಿ ಸೇರಿ 9 ಪ್ರಮುಖ ಬ್ರಿಟಿಷ್ ವಿಶ್ವವಿದ್ಯಾಲಯಗಳು ಭಾರತದಲ್ಲಿ ಕ್ಯಾಂಪಸ್ ಗಳನ್ನು ತೆಗೆಯುವುದಾಗಿ ಘೋಷಿಸಿದರು.
ಇದೀಗ ಸೌತ್ ಹ್ಯಾಂಪ್ಟನ್ ವಿಶ್ವವಿದ್ಯಾಲಯದ ಗುರುಗ್ರಾಮ ಕ್ಯಾಂಪಸ್ ಅನ್ನು ಈಗಾಗಲೇ ಉದ್ಘಾಟಿಸಲಾಗಿದ್ದು, ವಿದ್ಯಾರ್ಥಿಗಳ ಬ್ಯಾಚ್ ಆರಂಭಗೊಂಡಿದೆ. ಸಮಗ್ರ ಆರ್ಥಿಕ ವ್ಯಾಪಾರ ಒಪ್ಪಂದ (CETA)ಕ್ಕೆ ಸಹಿ ಹಾಕಿದ ನಂತರ ಭಾರತ-ಯುಕೆಯ ದ್ವಿಪಕ್ಷೀಯ ಸಂಬಂಧಗಳು ಹೊಸ ಎತ್ತರವನ್ನು ತಲುಪುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಈ ವರ್ಷದ ಜುಲೈನಲ್ಲಿ, ನಾನು ಯುಕೆಗೆ ಭೇಟಿ ನೀಡಿದ ಸಮಯದಲ್ಲಿ, ನಾವು ಐತಿಹಾಸಿಕ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ್ದೇವೆ ಎಂದು ಹೇಳಿದ್ದಾರೆ.
ಭಾರತ-ಯುಕೆ ಒಪ್ಪಂದದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಈ ಒಪ್ಪಂದವು ಎರಡೂ ದೇಶಗಳ ನಡುವಿನ ಆಮದು ವೆಚ್ಚವನ್ನು ಕಡಿಮೆ ಮಾಡುತ್ತದೆ, ಯುವಕರಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಮತ್ತು ಕೈಗಾರಿಕೆಗಳು ಮತ್ತು ಗ್ರಾಹಕರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ವ್ಯಾಪಾರವನ್ನು ಹೆಚ್ಚಿಸುತ್ತದೆ ಎಂದು ಸಂತಸ ಹಂಚಿಕೊಂಡಿದ್ದಾರೆ.