ಬೆಂಗಳೂರು : ಇಂದು ಸಂಜೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ. ಕರ್ನಾಟಕದ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಈ ಸಭೆಯ ನೇತೃತ್ವ ವಹಿಸಲಿದ್ದಾರೆ. ಅತಿವೃಷ್ಟಿಯಿಂದ ಆಗಿರುವ ಬೆಳೆನಷ್ಟ, ಬೆಂಗಳೂರಿನ ರಸ್ತೆಗುಂಡಿ, ಸುರಂಗ ಮಾರ್ಗ, ಜಿಬಿಎ ಬಹಿಷ್ಕಾರ, ರಾಜ್ಯದ ಕಾನೂನು ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಇಂದು ಸಂಜೆ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡುವ ಸಾಧ್ಯತೆಯಿದೆ.
ಇಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಸಮ್ಮುಖದಲ್ಲಿ ಕೋರ್ ಕಮಿಟಿ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಡಿವಿ ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಶಾಸಕ ಆರ್. ಅಶೋಕ್, ಸಂಸದ ಗೋವಿಂದ ಕಾರಜೋಳ, ಎಂಎಲ್ಸಿ ಸಿಟಿ ರವಿ ಮುಂತಾದವರು ಇಂದಿನ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ 2 ತಂಡಗಳು ಉತ್ತರ ಕರ್ನಾಟಕ ಭಾಗದಲ್ಲಿ ನೆರೆಬಾಧಿತ ಪ್ರದೇಶಗಳ ಪರಿಶೀಲನೆ ನಡೆಸಿತ್ತು. ಇದುವರೆಗೆ ಸರ್ಕಾರದಿಂದ ನೀಡಿರುವ ಪರಿಹಾರ ಹಾಗೂ ಜಂಟಿ ಸಮೀಕ್ಷೆ ಇತ್ಯಾದಿ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿರೋಧಿಸಿ ರಾಜಕೀಯ ಹೋರಾಟ ನಡೆಸುವ ಬಗ್ಗೆಯೂ ಬಿಜೆಪಿ ನಾಯಕರು ಚರ್ಚೆ ನಡೆಸುವ ಸಾಧ್ಯತೆಯಿದೆ. ಅತಿವೃಷ್ಟಿಯಿಂದ ಬಳಲುತ್ತಿರುವ ರೈತರಿಗೆ ಪರಿಹಾರಕ್ಕೆ ಒತ್ತಾಯಿಸಿ ಹೋರಾಟ ನಡೆಸುವ ಬಗ್ಗೆಯೂ ಚರ್ಚಿಸುವ ಸಾಧ್ಯತೆಯಿದೆ.