ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಮೈದಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಮಹಾರಾಷ್ಟ್ರದ ಸೋಲಾಪುರದಲ್ಲಿ ಬಂಧಿಸಿದ್ದಾರೆ.
ಬೆದರಿಕೆ ಕರೆ ಮಾಡಿದ ಆರೋಪಿಯನ್ನು ದಿನೇಶ್ ನರೋಣಿ ಎಂದು ಗುರುತಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ಮಹಾರಾಷ್ಟ್ರಕ್ಕೆ ತೆರಳಿ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತೀಚೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು, ‘ಆರ್‌ಎಸ್‌ಎಸ್ ಚಟುವಟಿಕೆಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿವೆ’ ಎಂದು ಆರೋಪಿಸಿ, ಸರ್ಕಾರಿ ಆವರಣಗಳಲ್ಲಿ ಅವುಗಳ ನಿಷೇಧಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಈ ರಾಜಕೀಯ ನಿರ್ಧಾರದ ಬೆನ್ನಲ್ಲೇ ಖರ್ಗೆ ಅವರಿಗೆ ದಿನೇಶ್ ನರೋಣಿ ಎಂಬ ವ್ಯಕ್ತಿ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತು ಬೆದರಿಕೆಯನ್ನು ಹಾಕಿದ್ದ.
ಘಟನೆಯ ನಂತರ, ಸಚಿವ ಪ್ರಿಯಾಂಕ್ ಖರ್ಗೆ ಅವರ ದೂರನ್ನು ಆಧರಿಸಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಬೆಂಗಳೂರು ನಗರ ಪೊಲೀಸರು ತನಿಖೆ ಆರಂಭಿಸಿದ್ದರು. ಆರೋಪಿಯು ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ, ಬೆಂಗಳೂರು ನಗರದ ಕೇಂದ್ರ ವಿಭಾಗದ ಪೊಲೀಸ್ ತಂಡವು ಮಹಾರಾಷ್ಟ್ರಕ್ಕೆ ತೆರಳಿತು.
ಬೆಂಗಳೂರು ಪೊಲೀಸರು ಸ್ಥಳೀಯ ಪೊಲೀಸರ ಸಹಾಯದೊಂದಿಗೆ, ಬೆಂಗಳೂರು ಹಾಗೂ ಕಲ್ಬುರ್ಗಿ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ದಿನೇಶ್ ನರೋಣಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಿದ್ದಾರೆ. ಖರ್ಗೆ ಅವರು ತಮ್ಮ ನಿಲುವು ಕುರಿತು ಸಾರ್ವಜನಿಕವಾಗಿ ವಿಡಿಯೋ ಸಂದೇಶವೊಂದನ್ನು ನೀಡುತ್ತಿದ್ದ ಸಂದರ್ಭದಲ್ಲಿಯೇ ಈ ಆರೋಪಿಯು ಕರೆ ಮಾಡಿ ಬೆದರಿಕೆ ಮತ್ತು ನಿಂದನೆ ಮಾಡಿದ್ದ ಎಂದು ತಿಳಿದುಬಂದಿದೆ.
ಆರ್‌ಎಸ್‌ಎಸ್ ಕುರಿತು ಖರ್ಗೆ ಅವರ ನಿಲುವಿಗೆ ರಾಜ್ಯಾದ್ಯಂತ ಪರ-ವಿರೋಧ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಬೆದರಿಕೆ ಕರೆಯು ಭಾರೀ ಸುದ್ದಿಯಾಗಿತ್ತು. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗೆ ಬೆದರಿಕೆ ಕರೆ ಮಾಡಿದ್ದ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಕ್ರಮ ಕೈಗೊಂಡಿರುವುದು ಗಮನಾರ್ಹವಾಗಿದೆ.