ಆಸ್ಟ್ರೇಲಿಯಾ : ಭಾರತ ತಂಡ ಪ್ರಸ್ತುತ ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ (ಅಕ್ಟೋಬರ್ 19) ಆರಂಭವಾಗಲಿದೆ. ಮೊದಲ ಪಂದ್ಯ ಪರ್ತ್ ಮೈದಾನದಲ್ಲಿ ನಡೆಯಲಿದ್ದು, ಯುವ ಆರಂಭಿಕ ಶುಭ್ಮನ್ ಗಿಲ್ ಭಾರತದ ನಾಯಕತ್ವ ವಹಿಸುತ್ತಿರುವುದರಿಂದ ಈ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಅಲ್ಲದೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 7 ತಿಂಗಳುಗಳ ನಂತರ ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿರುವುದು ಕೂಡ ಅಭಿಮಾನಿಗಳಿಗೆ ಹಬ್ಬದ ವಾತಾವರಣ ಸೃಷ್ಟಿ ಮಾಡಿದೆ.

ಟೆಸ್ಟ್ ಹಾಗೂ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಈ ಸರಣಿಯು ತುಂಬಾ ಮಹತ್ವದ್ದು. ಏಕೆಂದರೆ 2027ರ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೆ ಮುಂಬರುವ ಸರಣಿಗಳಲ್ಲಿ ಇಬ್ಬರು ಸಹ ಉತ್ತಮ ಪ್ರದರ್ಶನ ನೀಡಬೇಕಿದೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ನಿರ್ಣಾಯಕ ಎನ್ನಲಾಗಿದೆ.
ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್ ನೋಡುವುದೇಗೆ?
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಶುರುವಾಗಲಿದೆ. ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
ಉಭಯ ತಂಡಗಳು :
ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಫಿಲಿಪ್ , ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್,ಮ್ಯಾಥ್ಯೂ ಕುಹ್ನೆಮನ್, ಮಾರ್ನಸ್ ಲಾಬುಶೇನ್.
ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
- ಏಕದಿನ ಸರಣಿ ವೇಳಾಪಟ್ಟಿ :
- ಅಕ್ಟೋಬರ್ 19: ಮೊದಲ ಏಕದಿನ ಪಂದ್ಯ – ಪರ್ತ್ ಕ್ರೀಡಾಂಗಣ, ಪರ್ತ್
- ಅಕ್ಟೋಬರ್ 23: ಎರಡನೇ ಏಕದಿನ ಪಂದ್ಯ – ಅಡಿಲೇಡ್ ಓವಲ್
- ಅಕ್ಟೋಬರ್ 25: ಮೂರನೇ ಏಕದಿನ ಪಂದ್ಯ – ಸಿಡ್ನಿ ಕ್ರಿಕೆಟ್ ಮೈದಾನ, ಸಿಡ್ನಿ