ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವಾಲಯವು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ (Media Internship) ಯೋಜನೆ ಜಾರಿಗೆ ತಂದಿದೆ. ಇದರ ಅನ್ವಯ ಈಗ ವೃತ್ತಿ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೂಲಕ ಇಂಟರ್ನ್ ಶಿಪ್ ಪಡೆಯಬಹುದಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ಪಡೆದಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ನವದೆಹಲಿಯಲ್ಲಿ ಅಭ್ಯರ್ಥಿಗಳಿಗೆ 6-9 ತಿಂಗಳವರೆಗೆ ತರಬೇತಿ ನೀಡಲಾಗುತ್ತದೆ. ಇಂಟರ್ನ್ ಶಿಪ್ ಗೆ ಆಯ್ಕೆಯಾದವರಿಗೆ ಮೀಡಿಯಾ ಹಾಗೂ ಸೋಷಿಯಲ್ ಮೀಡಿಯಾ ನಿರ್ವಹಣೆ, ಚಟುವಟಿಕೆಗಳ ಕುರಿತು ತರಬೇತಿ ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಹಾಗೆಯೇ, ತರಬೇತಿಯ ಕೊನೆಯಲ್ಲಿ ಪ್ರಮಾಣಪತ್ರವನ್ನೂ ನೀಡಲಾಗುತ್ತದೆ. ಇದರಿಂದಾಗಿ ಪದವಿ, ಸ್ನಾತಕೋತ್ತರ ಪದವಿ ಮುಗಿಸಿದವರು ಮಾಧ್ಯಮದಲ್ಲಿ ಕೆಲಸ ಮಾಡಲು ಅನುಕೂಲವಾಗುತ್ತದೆ. ಹಾಗಾಗಿ, ಕೋರ್ಸ್ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೂಲಕ ಕೇಂದ್ರ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ https://mowr.nic.in/internship ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಲ್ಲಿ, ಅರ್ಜಿ ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು. ಇದಾದ ಬಳಿಕ ಇಂಟರ್ನ್ ಶಿಪ್ ಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ನವೆಂಬರ್ 24ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.