ಬೆಂಗಳೂರು: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ವಿಚಾರ ಈಗ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಎಸ್‌ಎಸ್ ವಾದವನ್ನು ಕೋರ್ಟ್ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ.
ಈ ಆದೇಶದಿಂದ ಇಂದು ಚಿತ್ತಾಪುರದಲ್ಲಿ ರ‍್ಯಾಲಿ ನಡೆಸಲು ನಿರ್ಧರಿಸಿದ್ದ ಆರ್‌ಎಸ್‌ಎಸ್ ಮತ್ತು ದಲಿತ ಸಂಘಟನೆಗಳಿಗೆ ಸದ್ಯ ಅವಕಾಶ ಇಲ್ಲದಂತಾಗಿದೆ. ಇಂದು (ಭಾನುವಾರ) ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವುದರಿಂದ ಹಲವು ಸಂಘಟನೆಗಳು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ರ‍್ಯಾಲಿ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಾರೆ. ಆದ ಕಾರಣ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಂದು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ತಿಳಿಸಿತು.
ಅದ್ದರಿಂದ ಇದೇ ದಿನ ಹೊಸದಾಗಿ ಮನವಿ ಸಲ್ಲಿಸಿ, ಯಾವ ಮಾರ್ಗದಲ್ಲಿ ರ‍್ಯಾಲಿ ನಡೆಸಲಾಗುವುದು ಎಂಬುದನ್ನು ತಿಳಿಸಿ, ಜಿಲ್ಲಾಡಳಿತ ಮತ್ತು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗೆ ಮನವಿ ಸಲ್ಲಿಸಬೇಕು. ಅದರಂತೆ, ಜಿಲ್ಲಾ ಮತ್ತು ತಾಲೂಕು ಆಡಳಿತ ರ‍್ಯಾಲಿಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ಪೀಠ, ಅರ್ಜಿಯ ವಿಚಾರಣೆಯನ್ನು ಮುಂದೂಡಿತು.