ಮುಂಬೈ : ಮಹಾರಾಷ್ಟ್ರದ ಸತಾರದಲ್ಲಿ ನಡೆದಿದ್ದ ವೈದ್ಯೆಯ ಆತ್ಮಹತ್ಯೆ ಪ್ರಕರಣದ ಆರೋಪಿ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದ್ನೆ ಶನಿವಾರ ಸಂಜೆ (ಅ.26) ಫಾಲ್ಟನ್ ಗ್ರಾಮೀಣ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ.
ಪ್ರಕರಣದ ಮತ್ತೊಬ್ಬ ಆರೋಪಿಯಾದ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್‌ನನ್ನು ಪುಣೆಯಲ್ಲಿ ಬಂಧಿಸಲಾಗಿತ್ತು. ಸಂತ್ರಸ್ತೆಗೆ ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಈತನನ್ನು ಸತಾರ ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಸತಾರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ಮೃತದೇಹ ಫಾಲ್ಟನ್ ಪಟ್ಟಣದ ಹೋಟೆಲ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ಅಂಗೈಯಲ್ಲಿ ಡೆತ್‌ನೋಟ್ ಬರೆದು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಬದ್ನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಸಾಫ್ಟ್‌ವೇರ್ ಎಂಜಿನಿಯರ್ ಬಂಕರ್ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದರು.
ಡೆತ್‌ನೋಟ್ ಆಧರಿಸಿ ಫಾಲ್ಟನ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಓರ್ವ ಆರೋಪಿ ಬಂಕರ್ ವೈದ್ಯೆ ವಾಸಿಸುತ್ತಿದ್ದ ಮನೆಯ ಮಾಲೀಕನ ಮಗನಾಗಿದ್ದಾನೆ. ಇನ್ನೂ, ತನಿಖೆಯ ಸಮಯದಲ್ಲಿ ಸಬ್ ಇನ್ಸ್‌ಪೆಕ್ಟರ್ ಬದ್ನೆ ವಿರುದ್ಧ ಆರೋಪ ಕೇಳಿಬರುತ್ತಿದ್ದಂತೆ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.



















