ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ RSS ಪಥಸಂಚಲನ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಪಥಸಂಚಲನ ನಿರ್ಬಂಧಿಸುವ ಸಂಬಂಧ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಹೈಕೋರ್ಟ್ನ ನ್ಯಾಯಮೂರ್ತಿ.ಎಂ. ನಾಗಪ್ರಸನ್ನ ಅವರಿದ್ದ ಪೀಠವು ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆರ್ಎಸ್ಎಸ್ ಪಥಸಂಚಲನಕ್ಕೆ ನಿರ್ಬಂಧಿಸುವ ಸರ್ಕಾರದ ಕ್ರಮ ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಪೀಠಕ್ಕೆ ಸಂಸ್ಥೆ ರಿಟ್ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ರಾಜ್ಯ ಸರ್ಕಾರ, ಗೃಹ ಇಲಾಖೆ, ಹುಬ್ಭಳ್ಳಿ ಕಮಿಷನರ್‌ಗೆ ನೋಟಿಸ್ ಜಾರಿ ಮಾಡಿದೆ.
ಆರ್ಎಸ್ಎಸ್ ಪಥಸಂಚಲನ ನಿರ್ಬಂಧದ ಬಗ್ಗೆ ಹೈಕೋರ್ಟ್ ಹೇಳಿದ್ದೇನು?
2025ರ ಅ.18ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್ಎಸ್ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ನ ಧಾರವಾಡ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.
ಕಲಬುರಗಿ ಚಿತ್ತಾಪುರದ ಆರ್ಎಸ್ಎಸ್ ಪಥಸಂಚಲನದ ಭವಿಷ್ಯ ಏನು?
ಚಿತ್ತಾಪುರದ ಆರ್ಎಸ್ಎಸ್ ಪಥಸಂಚಲನ ವಿಚಾರವಾಗಿ ಹೈಕೋರ್ಟ್ನ ಕಲಬುರಗಿ ಪೀಠ ಈಗಾಗಲೇ ವಿಚಾರಣೆ ನಡೆಸಿದ್ದು, ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ಅಕ್ಟೋಬರ್ 30ರಂದು ವರದಿ ನೀಡುವಂತೆ ಕೋರ್ಟ್ ತಿಳಿಸಿದೆ. ಸರ್ಕಾರ ಸಲ್ಲಿರುವ ವರದಿಯ ಆಧಾರದಲ್ಲಿ ತೀರ್ಪು ನೀಡಬೇಕಿದೆ. ಆದರೆ, ಈಗ ಒಟ್ಟಾರೆಯಾಗಿ ಸರ್ಕಾರದ ಆದೇಶಕ್ಕೆ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿರುವುದರಿಂದ ಇದು ಕಲಬುರಗಿ ಪೀಠದ ಆದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಇದನ್ನೂ ಓದಿ : ಬಿಜೆಪಿಯವರು ನನ್ನನ್ನು ವಿಷ್ಣುವಿನ ಮಾಡ್ರನ್ ಅವತಾರದಲ್ಲಿ ನೋಡ್ತಿದ್ದಾರೆ : ಪ್ರದೀಪ್ ಈಶ್ವರ್


















