ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್ ನೀಡುರುವ ಹಿನ್ನೆಲೆ ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ತುರ್ತು ಸಭೆ ನಡೆಸಿದೆ.
ಕಬ್ಬು ಬೆಳೆಗಾರರ ಸಮಸ್ಯೆ ಕುರಿತಾಗಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ನಡೆದಿದ್ದು, ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ರೈತರ ಪರ, ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್‌ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್‌ಪಿ ನಿಗದಿಪಡಿಸಿದೆ. ಈ ಎಫ್ಆರ್‌ಪಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಹೇಳಿದ್ದಾರೆ.
ಇನ್ನು, ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್‌ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.
ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಹೆಚ್.ಕೆ ಪಾಟೀಲ್, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಸತೀಶ್ ಜಾರಕಿಹೊಳಿ, ಆರ್.ಬಿ ತಿಮ್ಮಾಪುರ, ಶರಣ್ ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯಸಭೆ ಸದಸ್ಯರಾದ ಈರಣ್ಣ ಕಡಾಡಿ, ಲೆಹರ್ ಸಿಂಗ್, ಮುರುಗೇಶ್ ನಿರಾಣಿ ಇತರ ಸಚಿವರು ಪಾಲ್ಗೊಂಡಿದ್ದಾರೆ. ಜೊತೆಗೆ 82 ಮಾಲೀಕರ ಪೈಕಿ 52 ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಯಲ್ಲಿ ಪಾಲ್ಗೊಂಡು ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ | ವಾರವಾದ್ರು ಆರೋಪಿಯನ್ನು ಬಂಧಿಸಿಲ್ಲ ಎಂದು ಹೆತ್ತವರ ಆಕ್ರೋಶ



















