ಬೆಂಗಳೂರು : ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.
ಬೆಲೇಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಕಳ್ಳತನ, ಸಾಗಣೆ ಮಾಡಿ ಸರಕಾರಕ್ಕೆ ನಷ್ಟ ಉಂಟುಮಾಡಿದ ಆರೋಪದಡಿ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ವಿಚಾರಣೆಗೆ ಪದೇಪದೇ ಗೈರಾಗುತ್ತಿದ್ದಾರೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಾರೋಗ್ಯದ ಕಾರಣಕ್ಕೆ ಪಡೆದಿದ್ದ ಮಧ್ಯಂತರ ಜಾಮೀನನ್ನೂ ನ್ಯಾಯಾಲಯ ರದ್ದುಪಡಿಸಿದೆ.
ಶಾಸಕ ಸತೀಶ್ ಸೈಲ್ ಮತ್ತು ಇತರರ ವಿರುದ್ಧ ಸಿಬಿಐ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದೆ. ಈ ಪ್ರಕರಣಗಳ ವಿಚಾರಣೆಗೆ ಶಾಸಕರು ಸಹಕರಿಸುತ್ತಿಲ್ಲ. ಪದೇಪದೇ ನ್ಯಾಯಾಲಯಕ್ಕೆ ಗೈರು ಹಾಜರಾಗುತ್ತಿದ್ದಾರೆ. ಹೀಗಾಗಿ, ನ್ಯಾಯಾಲಯ ಜಾಮೀನುರಹಿತ ವಾರೆಂಟ್ ಹೊರಡಿಸಿದೆ.
ಶುಕ್ರವಾರದ ವಿಚಾರಣೆ ವೇಳೆ, ಸೈಲ್ ಅವರ ಪರ ವಕೀಲರು ಖುದ್ದು ಹಾಜರಾತಿಗೆ ವಿನಾಯಿತಿ ಕೋರಿದ್ದರು. ಆದರೆ, ನ್ಯಾಯಾಲಯ ಈ ಮನವಿಯನ್ನು ತಿರಸ್ಕರಿಸಿದೆ. ನ್ಯಾಯಾಲಯವು, “2014ರ ಪ್ರಕರಣದಲ್ಲಿ ಅನಗತ್ಯವಾಗಿ ವಿಚಾರಣೆ ವಿಳಂಬವಾಗುತ್ತಿದೆ. ಹಿಂದಿನ ಸಂದರ್ಭಗಳಲ್ಲಿ ಅರ್ಜಿದಾರರ ಗೈರು ಹಾಜರಿಗೆ ವಿನಾಯಿತಿ ನೀಡಲಾಗಿತ್ತು. ಆದರೆ, ಈಗ ನ್ಯಾಯಾಲಯ ಪಾಟಿ ಸವಾಲು ನಡೆಸುತ್ತಿರುವಾಗ, ವಿಚಾರಣೆ ವಿಳಂಬಗೊಳಿಸಲು ವಕೀಲರು ಮುಂದೂಡಿಕೆಯ ಮನವಿ ಮಾಡಿರುವುದು ಸಮಂಜಸವಲ್ಲ,” ಎಂದು ಸ್ಪಷ್ಟಪಡಿಸಿದೆ.
ಇತ್ತೀಚೆಗೆ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರು ಅನಾರೋಗ್ಯದ ಕಾರಣಕ್ಕೆ ಪಡೆದಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ರದ್ದುಪಡಿಸಿದೆ. ಇದರಿಂದಾಗಿ ಶಾಸಕ ಸೈಲ್ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.
ಇದನ್ನೂ ಓದಿ : ಗ್ರಾಹಕರೇ ಎಚ್ಚರ, ಕಾಲ್ ಮರ್ಜ್ ಮಾಡೋ ಮೂಲಕವೂ ನಿಮ್ಮ ಬ್ಯಾಂಕ್ ಖಾತೆಗೆ ಹಾಕ್ತಾರೆ ಕನ್ನ



















