ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ಬಳಿಕ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ತಕ್ಷಣವೇ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ರಾಜ್ಯದ ಎಲ್ಲಾ ಹಿರಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ.
ಬೆಂಗಳೂರು ಸೇರಿದಂತೆ ಜನನಿಬಿಡ ಪ್ರದೇಶಗಳೇ ಟಾರ್ಗೆಟ್
ರಾಜಧಾನಿ ಬೆಂಗಳೂರಿನಲ್ಲಿ ವಿಶೇಷ ಎಚ್ಚರಿಕೆ ವಹಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್ ಹಾಗೂ ಇತರೆ ಪ್ರಮುಖ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು, ಮಾಲ್‌ಗಳು, ಮಾರುಕಟ್ಟೆಗಳಂತಹ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ, ಅನುಮಾನಾಸ್ಪದ ವ್ಯಕ್ತಿಗಳು ಮತ್ತು ವಸ್ತುಗಳ ಮೇಲೆ ಹದ್ದಿನ ಕಣ್ಣಿಡಲು ಆದೇಶಿಸಲಾಗಿದೆ. ಈ ಸ್ಥಳಗಳಲ್ಲಿ ಗಸ್ತು ತೀವ್ರಗೊಳಿಸಿ, ಭದ್ರತಾ ಲೋಪಕ್ಕೆ ಯಾವುದೇ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೇರ ಸೂಚನೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (ಎಸ್ಪಿ) ಡಿಜಿಪಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲೆಗಳಲ್ಲಿನ ಭದ್ರತಾ ಸ್ಥಿತಿಗತಿಯನ್ನು ಖುದ್ದು ಮೇಲ್ವಿಚಾರಣೆ ನಡೆಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರಿಗೆ ಅಧಿಕಾರ ನೀಡಲಾಗಿದೆ. ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿಯೂ ತಪಾಸಣೆಯನ್ನು ತೀವ್ರಗೊಳಿಸಲು ಆದೇಶಿಸಲಾಗಿದೆ
ಇದನ್ನೂ ಓದಿ; ಭೀಕರ ಸ್ಫೋಟಕ್ಕೆ ಬೆಚ್ಚಿಬಿದ್ದ ದೆಹಲಿ | ಸಾವಿನ ಸಂಖ್ಯೆ 9ಕ್ಕೆ ಏರಿಕೆ.. ಹಲವರಿಗೆ ಗಂಭೀರ ಗಾಯ



















