ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114) ಇಂದು ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ತಿಮ್ಮಕ್ಕ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
“ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ. ಸಾವಿರಾರು ಗಿಡಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಸಲಹಿದ ತಿಮ್ಮಕ್ಕನವರು ತಮ್ಮ ಬಹುಪಾಲು ಜೀವಿತ ಕಾಲವನ್ನು ಪರಿಸರ ಸಂರಕ್ಷಣೆಗಾಗಿ ಮುಡಿಪಾಗಿಟ್ಟವರು. ಇಂದು ತಿಮ್ಮಕ್ಕನವರು ನಮ್ಮನ್ನು ಅಗಲಿದರೂ ಅವರ ಪರಿಸರ ಪ್ರೇಮ ಅವರನ್ನು ಚಿರಸ್ಥಾಯಿಯಾಗಿಸಿದೆ. ಅಗಲಿದ ಮಹಾಚೇತನಕ್ಕೆ ನನ್ನ ನಮನಗಳು. ಸಾಲುಮರದ ತಿಮ್ಮಕ್ಕನವರ ನಿಧನದಿಂದ ನಾಡು ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬವರ್ಗಕ್ಕೆ ನನ್ನ ಸಂತಾಪಗಳು” ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಸಂತಾಪ
“ಪರಿಸರಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಿಟ್ಟು ಪ್ರಕೃತಿಗಾಗಿಯೇ ಬದುಕಿ ಬಾಳಿದ ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು. ನಾಡಿಗೆ ಅವರು ನೀಡಿರುವ ಕೊಡುಗೆ, ಅವರಿಂದ ದೊರೆತಿರುವ ಪ್ರೇರಣೆ ಅಜರಾಮರ. ಅಗಲಿದ ಆ ಚೇತನಕ್ಕೆ ಚಿರಶಾಂತಿ ದೊರೆಯಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈಶ್ವರ ಬಿ ಖಂಡ್ರೆ ಸಂತಾಪ
“ವೃಕ್ಷಮಾತೆ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದ ಸಾಲು ಮರದ ತಿಮ್ಮಕ್ಕ ಅವರ ನಿಧನಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆಯ ಪರಿಸರ ಪ್ರಚಾರಕರಾಗಿದ್ದರು. ಮಕ್ಕಳಿಲ್ಲದ ಈ ಮಹಾತಾಯಿ ಮರಗಳನ್ನೇ ಮಕ್ಕಳಂತೆ ಬೆಳೆಸುವ ಮೂಲಕ ಹಸಿರಿನ ಮಹತ್ವವನ್ನು ಜಗತ್ತಿಗೆ ಸಾರಿದ್ದರು” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಸಂತಾಪ
“ವೃಕ್ಷಮಾತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಅವರ ನಿಧನದ ಶುದ್ದಿ ಕೇಳಿ ಅತ್ಯಂತ ಆಘಾತವಾಗಿದೆ. ಸಾವಿರಾರು ಗಿಡಗಳನ್ನು ನೆಟ್ಟು ಮಕ್ಕಳಂತೆ ಸಲುಹಿ ತನ್ನ ಇಡೀ ಜೀವನವನ್ನೇ ಪರಿಸರದ ಉಳುವಿಗಾಗಿ ಮುಡುಪಾಗಿಟ್ಟು ಅವರು ಮಾಡಿರುವ ಪರಿಸರ ಸೇವೆ ಸದಾಕಾಲ ಅವರನ್ನು ಜೀವಂತವಾಗಿಡುತ್ತದೆ. ಅವರ ಸಾಧನೆಗೆ ಪದ್ಮಶ್ರೀ, ರಾಜ್ಯೋತ್ಸವ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರನ್ನು ಅರಸಿ ಬಂದಿದ್ದವು. ಅವರ ಅಗಲಿಕೆಯಿಂದ ನಾಡು ಹಿರಿಯ ಜೀವವನ್ನು ಕಳೆದುಕೊಂಡು ಬಡವಾದಂತಾಗಿದೆ. ತಿಮ್ಮಕ್ಕ ಅವರ ಕಾರ್ಯ ಸದಾ ಪ್ರೇರಣೆಯಾಗಿದೆ. ದೇವರು ಹಿರಿಯ ಜೀವಕ್ಕೆ ಚಿರ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಎಲ್ಲ ಅವರ ಅಭಿಮಾನಿಗಳಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ರಾಜಮೌಳಿ ‘ಸಮಯ ಪ್ರಜ್ಞೆ’.. ಟಾಲಿವುಡ್ ಫ್ಯಾನ್ಸ್ ಹೇಳಿದ್ದೇನು?



















