ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ನಿನ್ನೆ ಶುಕ್ರವಾರ ವಿಧಿವಶರಾಗಿದ್ದು, ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಜ್ಞಾನಭಾರತಿ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
114 ವರ್ಷದ ತಿಮ್ಮಕ್ಕ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದರು. ಮಕ್ಕಳಿಲ್ಲದ ತಿಮ್ಮಕ್ಕ ಅವರನ್ನು ಸಾಕು ಮಗ ಉಮೇಶ್ ಬಳ್ಳೂರು ನೋಡಿಕೊಳ್ಳುತ್ತಿದ್ದರು.
ಇಂದು ಬೆಳಗ್ಗೆ 8:30 ರಿಂದ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಾಜಕೀಯ ಗಣ್ಯರು, ಚಿತ್ರರಂಗದ ಪ್ರಮುಖರು ಹಾಗೂ ಪರಿಸರ ಪ್ರೇಮಿಗಳು ಅಂತಿಮ ದರ್ಶನದಲ್ಲಿ ಪಾಲ್ಗೊಂಡಿದ್ದರು. 11 ಗಂಟೆ ಬಳಿಕ ಜ್ಞಾನಭಾರತಿ ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ.
ಇದನ್ನೂ ಓದಿ: ಸಾಲುಮರದ ತಿಮ್ಮಕ್ಕನಿಗೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭಾವುಕ ನಮನ | ಸುದೀರ್ಘ ಪೋಸ್ಟ್ ಮೂಲಕ ಹೇಳಿದ್ದೇನು?



















