ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ ಬಸವನಗುಡಿಯಲ್ಲಿರುವ ಅವರ ಬಾಡಿಗೆ ಮನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಶಿವಮೊಗ್ಗ ಲೋಕಾಯುಕ್ತ ಎಸ್ಪಿ ಮಂಜುನಾಥ್ ಚೌಧರಿ ನೇತೃತ್ವದಲ್ಲಿ ಪ್ರತ್ಯೇಕವಾಗಿ 6 ತಂಡಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ ಆದಾಯಕ್ಕಿಂತಲೂ ಹೆಚ್ಚಿನ ಆಸ್ತಿ ಹೊಂದಿರುವ ದಾಖಲೆ ಪತ್ತೆಯಾಗಿದೆ.
ಇದನ್ನೂ ಓದಿ: ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ಲೋಕಾ ಶಾಕ್ | ಕೃಷಿ ಇಲಾಖೆ ಜಂಟಿ ನಿರ್ದೇಶಕನ ಮನೆ ಮೇಲೆ ದಾಳಿ



















