ಬೆಂಗಳೂರು: ರಾಜ್ಯಾದ್ಯಂತ ಎಸ್ಎಸ್ಎಲ್ಸಿ (SSLC) ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಇಂದು ನಡೆಯುತ್ತಿದ್ದ ಸಮಾಜ ವಿಜ್ಞಾನ ವಿಷಯದ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಕೂಡ ಲೀಕ್ ಆಗಿದೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಇತ್ತು. ಆದರೆ 8 ಗಂಟೆ 10 ನಿಮಿಷ ಹೊತ್ತಿಗೆ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ ಎಂದು ತಿಳಿದು ಬಂದಿದೆ. ಇಂತಹ ಅವ್ಯವಸ್ಥೆಗೆ ಶಿಕ್ಷಣ ಇಲಾಖೆಯ ದಿವ್ಯ ನಿರ್ಲಕ್ಷ್ಯವೇ ಕಾರಣ ಎಂಬ ಮಾತು ಕೇಳಿ ಬರುತ್ತಿದೆ.
ಸಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟಾಗಿದೆ. “Delta SSLC” ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ 30 ರೂಪಾಯಿಗೆ SSLC ಪ್ರಶ್ನೆ ಪತ್ರಿಕೆ ಲೀಕ್ ಮಾಡಲಾಗುತ್ತಿದೆ ಎಂಬುವುದು ಬೆಳಕಿಗೆ ಬಂದಿದೆ. ಈ ಖಾತೆ ಪ್ರತಿವರ್ಷವೂ ಪರೀಕ್ಷೆ ಸಮಯದಲ್ಲಿ ಸಕ್ರಿಯವಾಗುತ್ತಿದ್ದು, ಕಳೆದ ವರ್ಷವೂ ಇದೇ ಖಾತೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪಗಳು ಕೇಳಿಬಂದಿದ್ದವು. ಆದರೂ, ಈ ಬಗ್ಗೆ ಪರೀಕ್ಷಾ ಮಂಡಳಿ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ.
ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಪರೀಕ್ಷಾ ವ್ಯವಸ್ಥೆಯ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ವಿಷಯದ ಕುರಿತು ಇನ್ನೂ ಪರೀಕ್ಷಾ ಮಂಡಳಿಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚುವಂತೆ ಶಿಕ್ಷಣ ಇಲಾಖೆ ಮೇಲೆ ಒತ್ತಡ ಹೆಚ್ಚುತ್ತಿದೆ.
ಎಸ್ಎಸ್ಎಲ್ಸಿ ಪರೀಕ್ಷೆ ಸಮೀಪ ಬರುತ್ತಿರುವ ವೇಳೆ ಕಿಡಿಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುವ ಕೆಲಸ ಮಾಡುತ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನು ಕೊಡುತ್ತಿದ್ದೇವೆ ಎಂದು ಇನ್ಸ್ಟಾಗ್ರಾಮ್ನಲ್ಲೇ ಹಣಕ್ಕೆ ಪೇಪರ್ ಲೀಕ್ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಶಿಕ್ಷಣ ಇಲಾಖೆಯ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಲೀಕಾಸುರರಿಗೆ ಕಡಿವಾಣ ಹಾಕುವಲ್ಲಿ ಇಲಾಖೆ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಚಿಕ್ಕಮಗಳೂರು | ನಾಯಿಯನ್ನು ಬೇಟೆಯಾಡಲು ಬಂದ ಚಿರತೆ.. ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ!



















