ಬಳ್ಳಾರಿ : ಬ್ಯಾನರ್ ವಿಚಾರಕ್ಕೆ ಗಲಭೆ ಮತ್ತು ಫೈರಿಂಗ್ ಪ್ರಕರಣ ಘಟನೆ ಖಂಡಿಸಿ ಜ 17ರಂದು ಬಳ್ಳಾರಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ. ಈಗಾಗಲೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಈ ಬೆನ್ನಲ್ಲೇ ಇದೀಗ ಮದ್ಯ ಮಾರಾಟ ನಿಷೇಧ ಮಾಡಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಬಿಜೆಪಿಯಿಂದ ಪ್ರತಿಭಟನಾ ಸಮಾವೇಶ ಹಿನ್ನೆಲೆ ನಗರದಲ್ಲಿ ಇಂದು ರಾತ್ರಿ 10 ಗಂಟೆಯಿಂದ ನಾಡಿದ್ದು ಅಂದರೆ ಜನವರಿ 18ರ ಬೆಳಗ್ಗೆ 6 ಗಂಟೆವರೆಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿರ್ಬಂಧಿಸಿ ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್ ಆದೇಶ ಹೊರಡಿಸಿದ್ದಾರೆ.
ನಗರದಾದ್ಯಂತ ಪ್ರತಿಭಟನೆ ಶಾಂತ ರೀತಿಯಿಂದ ನಡೆಯಬೇಕೆಂದು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಂಡಿದ್ದು, ಈ ಬಂದೋಬಸ್ತ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಬಾರ್, ರೆಸ್ಟೋರೆಂಟ್ ಮತ್ತು ಇತರೆ ಸ್ಥಳಗಳಗಳಲ್ಲಿ ಮದ್ಯ ಮಾರಾಟ ಹಾಗೂ ಸಾಗಾಣಿಕೆ ಮಾಡದಂತೆ ಮತ್ತು ಮದ್ಯದಂಗಡಿಗಳನ್ನು ಬಳ್ಳಾರಿ ನಗರದಾದ್ಯಂತ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಬಿಜೆಪಿಯಿಂದ ಪ್ರತಿಭಟನಾ ರ‍್ಯಾಲಿ ಹಿನ್ನೆಲೆ ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ ಅವರು ಮಾತನಾಡಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಾಗಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಂಡಿದೆ. ಶಾಂತಿ ಭಂಗ ಉಂಟುಮಾಡುವವರ ವಿರುದ್ಧ ನಿಗಾವಹಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲೆಯ ಗಡಿಭಾಗಗಳಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಅಂತರ್ ರಾಜ್ಯ ಮತ್ತು ಅಂತರ್ ಜಿಲ್ಲೆಗಳಿಂದ ಆಗಮಿಸುವ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳ ಮೇಲೆ ನಿಗಾ ಇಡಲಾಗಿದೆ. ನಿರಂತರ ತಪಾಸಣಾ ಕಾರ್ಯ ಕೈಗೊಳ್ಳಲಾಗಿದ್ದು, ನಗರದ ಲಾಡ್ಜ್‌ಗಳು ಹಾಗೂ ವಸತಿ ನಿಲಯಗಳಲ್ಲಿ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ. ಬಳ್ಳಾರಿ ವಲಯದ ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲಾಗಿದೆ.
ವಿಶೇಷವಾಗಿ ಬಳ್ಳಾರಿ ನಗರದಲ್ಲಿ ವಲಯವಾರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲಾಗಿದೆ. ಅವರೆಲ್ಲ ಪಾಳಿಯಂತೆ ಕರ್ತವ್ಯ ನಿರ್ವಹಿಸಲಿದ್ದಾರೆ. ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಿದ್ದೇವೆ. ಕಾನೂನು ನಿಯಮ ಉಲ್ಲಂಘಿಸುವವರ ಅಥವಾ ಸಮಾಜದ ಶಾಂತಿ ಕದಡುವವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ದಿನಕ್ಕೆ ಕೇವಲ 7 ರೂಪಾಯಿ ಉಳಿಸಿ, ತಿಂಗಳಿಗೆ 5 ಸಾವಿರ ರೂಪಾಯಿ ಪೆನ್ಶನ್ ಪಡೆಯಿರಿ | ಏನಿದು ಸ್ಕೀಮ್?



















