ಚಾಮರಾಜನಗರ : ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ, ಕಾಲ್ನಡಿಗೆ ಹಾಗೂ ದ್ವಿಚಕ್ರ ವಾಹನ ಸಂಚಾರವನ್ನು ಬೆಳಗ್ಗೆ 7 ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಶನಿವಾರ ಈ ಆದೇಶ ಹೊರಡಿಸಲಾಗಿದ್ದು, ‘ಸಂಜೆ 4ರ ನಂತರದ ಅವಧಿಯಲ್ಲಿ ಪಾದಯಾತ್ರೆ, ಕಾಲ್ನಡಿಗೆ ಹಾಗೂ ದ್ವಿಚಕ್ರ ವಾಹನಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಮಾಹಿತಿ ನೀಡಿದ್ದಾರೆ.
ಭಕ್ತರ ಸುರಕ್ಷತೆಗಾಗಿ ಈ ಕ್ರಮ |
ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟು ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಭಕ್ತರು ಹಾಗೂ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಿ, ನಿರ್ಬಂಧಿತ ಅವಧಿಯಲ್ಲಿ ಕಾಲ್ನಡಿಗೆ, ಪಾದಯಾತ್ರೆ, ದ್ವಿಚಕ್ರವಾಹನಗಳಲ್ಲಿ ಪ್ರಯಾಣಿಸಬಾರದೆಂದು ಪ್ರಕಟಣೆ ಮೂಲಕ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕನೊಬ್ಬ ಚಿರತೆ ದಾಳಿಗೆ ಬಲಿಯಾದ ಘಟನೆ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳುಬೆಟ್ಟದಲ್ಲಿ ಕಳೆದ 21 ರಂದು ನಡೆದಿತ್ತು. ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಎಂಬುವವರು ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದಾಗ ರಂಗಸ್ವಾಮಿ ಒಡ್ಡಿನ ಸಮೀಪ ಚಿರತೆ ದಾಳಿ ಮಾಡಿತ್ತು. ಪರಿಣಾಮ ಆತ ಮೃತಪಟ್ಟಿದ್ದ. ಘಟನೆಯ ಬೆನ್ನಲ್ಲೇ ಮಲೆ ಮಹದೇಶ್ವರ ವನ್ಯಜೀವಿಧಾಮದ ಅಧಿಕಾರಿಗಳು ಬೋನುಗಳನ್ನು ಇಟ್ಟು ಕಾರ್ಯಾಚರಣೆ ನಡೆಸಿ ಆ ಚಿರತೆಯನ್ನು ಸೆರೆ ಹಿಡಿದಿದ್ದಲ್ಲದೇ ಮೈಸೂರಿನ ಕೂರ್ಗಳ್ಳಿಯ ಪುನರ್ವಸತಿ ಕೇಂದ್ರಕ್ಕೆ ರವಾನೆ ಮಾಡಿದ್ದಾರೆ.
ಇದನ್ನೂ ಓದಿ : ಹೈದರಾಬಾದ್‌ನ ಫರ್ನಿಚರ್ಸ್ ಅಂಗಡಿಯಲ್ಲಿ ಅಗ್ನಿ ಅವಘಡ | ಐವರು ಸಜೀವ ದಹನ



















