ಉಡುಪಿ : ಅಲೆಗಳ ಅಬ್ಬರಕ್ಕೆ ಸಿಲುಕಿ ಪ್ರವಾಸಿಗರ ಬೋಟ್ ಸಮುದ್ರಕ್ಕೆ ಮಗುಚಿದ ಘಟನೆ ಉಡುಪಿಯ ಮಲ್ಪೆ ಬಳಿಯ ಕೋಡಿಬೆಂಗ್ರೆ ಅಳಿವೆ ಬಾಗಿಲಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ದುರಂತದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಶಂಕರಪ್ಪ(22) ಹಾಗೂ ಸಿಂಧು(23) ಎಂದು ಗುರುತಿಸಲಾಗಿದೆ.
ಈ ದುರಂತದಲ್ಲಿ ಹಲವರು ಅಸ್ವಸ್ಥಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲರು ಮೈಸೂರು ಜಿಲ್ಲೆಯ ಸರಸ್ವತೀಪುರಂ ಮೂಲದವರಾಗಿದ್ದು, ಅಲ್ಲಿನ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 28 ಮಂದಿಯ ತಂಡವು ಎರಡು ಪ್ರವಾಸಿ ಬೋಟ್‌ಗಳಲ್ಲಿ ವಿಹಾರಕ್ಕೆ ತೆರಳಿತ್ತು. ಒಂದೊಂದು ಬೋಟ್‌ನಲ್ಲಿ 14 ಮಂದಿ ಇದ್ದು, ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ಸಮುದ್ರದ ಭಾರೀ ಅಲೆಗಳಿಗೆ ಸಿಲುಕಿದ ಒಂದು ಬೋಟ್ ಅಚಾನಕ್ಕಾಗಿ ಮಗುಚಿ ಬಿದ್ದಿದೆ.
ಇದರಿಂದ ದೋಣಿಯಲ್ಲಿದ್ದ 14 ಮಂದಿ ಸಮುದ್ರದ ನೀರಿಗೆ ಬಿದ್ದಿದ್ದಾರೆ. ಇವರಲ್ಲಿ ಕೆಲವರು ಮಾತ್ರ ಲೈಫ್‌ಜಾಕೆಟ್ ಧರಿಸಿದ್ದರೆನ್ನಲಾಗಿದೆ. ಕೂಡಲೇ ಇತರ ದೋಣಿಯವರು ನೀರಿಗೆ ಬಿದ್ದವರನ್ನು ರಕ್ಷಿಸಿ ತೀರಕ್ಕೆ ಕರೆದುಕೊಂಡು ಬಂದಿದ್ದು, ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಕೂಡಲೇ ಇವರನ್ನು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತಕ್ಕೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಕಾರಣವಾಗಿದೆಯೇ ಎಂಬ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ | ಪತಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ!



















