ಬೆಂಗಳೂರು | ರಾಜ್ಯದ ಪ್ರತಿಷ್ಠಿತ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ದಿಢೀರ್ ಮುಂದೂಡಲಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಆದರೆ, ಕೊನೆಕ್ಷಣದಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ ಬೆಂಬಲಿಗ ಶಾಸಕ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಬೆಂಬಲಿಗ ವಿಧಾನಪರಿಷತ್ ಸದಸ್ಯ ಎಸ್.ರವಿ ನಡುವೆ ಫೈಟ್ ನಡೆಯುತ್ತಿದೆ. ಇದರ ಜೊತೆಗೆ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಕೂಡ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಿದ್ದರು.
ಅಪೆಕ್ಸ್ ಬ್ಯಾಂಕ್‌ನ ನಿರ್ದೇಶಕರ ಪೈಕಿ 15 ಮಂದಿ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಹೀಗಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ನಾಯಕರುಗಳಿಗೆ ಸಿಗಲಿದೆ. ಆದರೆ, ಕಾಂಗ್ರೆಸ್ ಪಕ್ಷವು ಯಾರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ. ಇನ್ನು, ಕಾಂಗ್ರೆಸ್‌ನ ರಾಜ್ಯ ನಾಯಕತ್ವ ಹಾಗೂ ಹೈಕಮ್ಯಾಂಡ್ ಯಾರಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ ನೀಡಬೇಕು ಎಂಬ ಬಗ್ಗೆ ಸಹಮತಿ ಮೂಡಿರಲಿಲ್ಲ ಎನ್ನಲಾಗಿದೆ.
ಹೀಗಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯನ್ನು ಇಂದು ಬೆಳಿಗ್ಗೆ ದಿಢೀರನೇ ಮುಂದೂಡಲಾಗಿದೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕಾಗಿ ಸಿಎಂ, ಡಿಸಿಎಂ ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಈ ಭಾರಿ ಅಧ್ಯಕ್ಷ ಸ್ಥಾನ ಯಾರ ಪಾಲಾಗುತ್ತೆ ಎಂಬ ಬಗ್ಗೆ ಇನ್ನೂ ಕುತೂಹಲ ಮುಂದುವರಿದಿದೆ.
ಇದನ್ನೂ ಓದಿ : ಮೈಸೂರು ಮೃಗಾಲಯದಲ್ಲೇ ಹುಟ್ಟಿ ಬೆಳೆದ ದೀರ್ಘಾಯುಷಿ ಜಿರಾಫೆ ‘ಯುವರಾಜ’ ಇನ್ನಿಲ್ಲ



















