ಬೆಂಗಳೂರು: ಪಬ್‌ನಲ್ಲಿ ದುರ್ವರ್ತನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ವಿರುದ್ಧ ಕೊನೆಗೂ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ (NCR) ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರಿಗೆ ಆಗಮಿಸಿದ್ದ ವೇಳೆ ಆರ್ಯನ್ ಖಾನ್ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ನ. 29ರಂದು ಬೆಂಗಳೂರಿಗೆ ಬಂದಿದ್ದ ಆರ್ಯನ್ ಖಾನ್, ಸೋರ್ ಬೆರ್ರಿ ಪಬ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿತ್ತು.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಪ್ರಕರಣ ಸಂಬಂಧ ಮಾಹಿತಿ ಸಂಗ್ರಹಿಸಿದ್ದು, ಪಬ್ ಮ್ಯಾನೇಜರ್ ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತವಾಗಿತ್ತು. ಘಟನೆ ಸಂಬಂಧ ಸಾಮಾಜಿಕ ಕಾರ್ಯಕರ್ತ ತೇಜಸ್ ಗೌಡ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣ ಇದೀಗ ಅಧಿಕೃತ ತನಿಖೆಯ ಹಂತಕ್ಕೆ ಪ್ರವೇಶಿಸಿದೆ.
ಇದನ್ನೂ ಓದಿ : ಫೆ.1ರಂದು ಕೇಂದ್ರ ಬಜೆಟ್ ಮಂಡನೆ | GST ಕಡಿತಗೊಳಿಸುವಂತೆ ಬೆಂಗಳೂರು ಹೋಟೆಲ್ ಮಾಲೀಕರಿಂದ ವಿತ್ತ ಸಚಿವೆಗೆ ಮನವಿ



















