ನೆಲಮಂಗಲ: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಖಾಸಗಿ ಬಸ್ ಒಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ಗೆ ಸೇರಿದ ಬಸ್, ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಲ್ಲಿ ನಡೆಯುತ್ತಿದ್ದ ಕಾಮಗಾರಿ ಹಿನ್ನೆಲೆ ಬಸ್ ನಿಧಾನವಾಗಿ ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ತಕ್ಷಣವೇ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣ ಬಸ್ ಅಗ್ನಿಗೆ ಆಹುತಿಯಾಗಿದೆ. ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಇದ್ದರು. ಬೆಂಕಿ ಕಾಣುತ್ತಿದ್ದಂತೆ ಚಾಲಕ ಹಾಗೂ ಪ್ರಯಾಣಿಕರು ತಕ್ಷಣ ಬಸ್‌ನಿಂದ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನೆಯ ಮಾಹಿತಿ ಪಡೆದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ : ಸ್ಕೂಟಿಗೆ ಡಿಕ್ಕಿಯಾಗಿ ಸಹಸವಾರೆಯ ಮೇಲೆಯೇ ಹರಿದ ಬಸ್ | ಯುವತಿ ಸಾವು


















