ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ಬಾರಿ ವಿಪರೀತ ಬಿಸಿಲಿನ ಧಗೆ ಅನುಭವಿಸಬೇಕಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಈ ಬಾರಿ ದಾಖಲೆ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಬೆಂಗಳೂರಲ್ಲೂ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ ಏರಿಕೆಯಾಗಲಿದ್ದು, ಏಪ್ರಿಲ್ ತಿಂಗಳಲ್ಲಿ 38ರಿಂದ 40 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ತಲುಪುವ ಸಾಧ್ಯತೆ ಇದೆ.
ರಾಜ್ಯದ ಇತರೆ ಜಿಲ್ಲೆಗಳಲ್ಲೂ 40 ಡಿಗ್ರಿ ಗಡಿಯನ್ನು ದಾಟುವ ಸಾಧ್ಯತೆ ಇದೆ ಎಂದು ಇಲಾಖೆ ಸೂಚಿಸಿದೆ. ಬೇಸಿಗೆ ಅಧಿಕೃತವಾಗಿ ಆರಂಭವಾಗಲು ಇನ್ನೂ ಸುಮಾರು 15 ದಿನಗಳಿದ್ದರೂ, ಈಗಾಗಲೇ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ.
ಬೆಂಗಳೂರಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ 31 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಇಂದು ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಿಸಿಲಿನ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಇದನ್ನೂ ಓದಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೋಗಿಲು ಲೇಔಟ್ ನಿರಾಶ್ರಿತರ ಮನೆ ಹಂಚಿಕೆಗೆ ಲಾಜಿಕಲ್ ಎಂಡ್ ಸಿಕ್ತಾ?


















